ಕೆ.ಆರ್.ಪೇಟೆ : ಕನ್ನಡ ಭಾಷೆ, ನೆಲ, ಜಲ ವಿಚಾರ ಬಂದಾಗ ಅದರ ಉಳಿವಿಗಾಗಿ ಕನ್ನಡಿಗರೆಲ್ಲಾ ಒಗ್ಗಟ್ಟಿನಿಂದ ಹೋರಾಡಬೇಕಾದ ಅನಿವಾರ್ಯತೆ ಇದೆ. ನಮ್ಮ ಕನ್ನಡ ಭಾಣೆಯು ಸೂರ್ಯ- ಚಂದ್ರರು ಇರುವ ತನಕ ಜೀವಂತವಾಗಿ ಇರಲಿದೆ. ಈ ನಿಟ್ಟಿನಲ್ಲಿ ಅಖಂಡ ಕರ್ನಾಟಕವನ್ನು ಉಳಿಸಿ ಅಭಿವೃದ್ಧಿ ಪಡಿಸಬೇಕಾಗಿದೆ ಎಂದು ಶಾಸಕ ಹೆಚ್.ಟಿ.ಮಂಜು ಅಭಿಪ್ರಾಪಟ್ಟರು.

ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಆಯೋಜಿಸಲಾಗಿದ್ದ 70 ನೇ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಮಾತನಾಡಿದರು.

ಕನ್ನಡ ಭಾಷೆಗೆ ವಿಶೇಷ ಸ್ಥಾನಮಾನವಿದೆ. ಕನ್ನಡಿಗರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಕನ್ನಡಿಗರಾದ ಹೆಚ್.ಡಿ.ದೇವೇಗೌಡರು ದೇಶದ ಪ್ರಧಾನಿಗಳಾಗಿ ಕನ್ನಡದ ಹಿರಿಮೆಯನ್ನು ರಾಷ್ಟ್ರ ಪಟ್ಟದಲ್ಲಿ ಎತ್ತಿ ಹಿಡಿದಿದ್ದಾರೆ. ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಗೆ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳಿಸುವಲ್ಲಿ ಮುಂಚೂಣಿಯಲ್ಲಿದೆ. ನವೆಂಬರ್ ತಿಂಗಳು ಬಂತೆಂದರೆ ಎಲ್ಲಿಲ್ಲದ ಆನಂದ ಖುಷಿಯಾಗುತ್ತೆ.
ಖಾಸಗಿ ವಲಯ ಇಂಗ್ಲೀಷ್ ವ್ಯಾಮೋಹಕ್ಕೆ ಜೋತುಬಿದ್ದು ಕನ್ನಡ ತನವನ್ನು ಮರೆಯುತ್ತಿರುವುದು ಬೇಸರ ಸಂಗತಿ. ಇತರೆ ಭಾಷೆಗಳನ್ನು ಕೇವಲ ವ್ಯವಹಾರಿಕ ದೃಷ್ಠಿಯಿಂದ ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಬಳಸಬೇಕು. ರಾಜ್ಯದಲ್ಲಿ ಅತೀ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆ ಮಂಡ್ಯ. ಇಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸು ಗಳಿಸಿದ್ದು ಹೆಮ್ಮೆಯ ವಿಷಯ ಎಂದು ಅಭಿಮಾನದ ಮಾತುಗಳನ್ನಾಡಿದರು. ತಾಲ್ಲೂಕಿನ ಕೆ.ಎಸ್.ನರಸಿಂಹಸ್ವಾಮಿ, ಅ.ರಾ.ಮಿತ್ರ, ಸುಜನಾ, ಅರ್ಚಕ ರಂಗಸ್ವಾಮಿ ಭಟ್ಟರು ರಂತಹ ಸಾಹಿತಿಗಳು ಕನ್ನಡ ಸಾಹಿತ್ಯಕ್ಕೆ ಅವರದೇ ಆದ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ಲಾಘೀಸಿದರು. ಪಟ್ಟಣದಲ್ಲಿ ಕನ್ನಡ ಭವನವನ್ನು ನಿರ್ಮಾಣ ಮಾಡಲು ನನ್ನ ಶಕ್ತಿ ಮೀರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಶಾಸಕರು ಇದೇ ಸಂದರ್ಭದಲ್ಲಿ ತಿಳಿಸಿದರು.

ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಮಾತನಾಡಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ನೀತಿಯನ್ನು ಖಂಡಿಸಿದರು. ಕನ್ನಡವನ್ನು ಕಟ್ಟುವ ಕೆಲಸದಲ್ಲಿ ಕನ್ನಡಿಗರು ಮಹತ್ವದ ಪಾತ್ರ ವಹಿಸಬೇಕು. ಕನ್ನಡದ ನೆಲದಲ್ಲಿ ಬದುಕುತ್ತಿರುವ ಅನ್ಯಭಾಷಿಕರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸುವ ಮೂಲಕ ಇತರರಿಗೆ ಕನ್ನಡ ಕಲಿಸುವ ಕೆಲಸ ಮಾಡಬೇಕು. ಕನ್ನಡಿಗರು ಮೊದಲು ಕನ್ನಡ ಪ್ರೇಮವನ್ನು ಬೆಳೆಸಿಕೊಳ್ಳದಿದ್ದರೆ ಕನ್ನಡದ ನೆಲ ಜಲದ ಸಂರಕ್ಷಣೆ ಅಸಾಧ್ಯ ಎಂದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಜಯಕೀರ್ತಿ ಕನ್ನಡ ನಾಡು ನುಡಿಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ತಾಲ್ಲೂಕು ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಬಲದೇವ್,
ತಹಶೀಲ್ದಾರ್ ಡಾ.ಎಸ್.ಯು.ಅಶೋಕ್, ತಾ.ಪಂ.ಇಓ ಕೆ.ಸುಷ್ಮಾ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಕೆ.ತಿಮ್ಮೇಗೌಡ, ಪುರಸಭೆ ಮುಖ್ಯಾಧಿಕಾರಿ ಅಶೋಕ್, ಪೊಲೀಸ್ ಇನ್ಸ್ಪೆಕ್ಟರ್ ಬಿ.ಸುಮಾರಾಣಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹೆಚ್.ಆರ್.ಪೂರ್ಣಚಂದ್ರತೇಜಶ್ವಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಆರ್. ಆನಂದ್ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯ ಮಂಡ್ಯ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು, ತಾಲ್ಲೂಕು ಕರವೇ ಅಧ್ಯಕ್ಷ ಟೆಂಪೋ ಶ್ರೀನಿವಾಸ್, ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಹೆಚ್.ಆರ್. ಸೋಮಶೇಖರ್, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ಶಿವಪ್ಪ, ಬಿಇಓ ವೈ.ಕೆ.ತಿಮ್ಮೇಗೌಡ, ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ದೇವರಾಜು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕೆ.ದಿವಾಕರ್, ಬಿಸಿಎಂ ಅಧಿಕಾರಿ ಎಂ.ಎನ್.ವೆಂಕಟೇಶ್, ಸಿಡಿಪಿಓ ವಿದ್ಯಾವತಿ, ಶಾಂತವ್ವ ಹಾವಣ್ಣನವರ್, ಕಸಬಾ ಹೋಬಳಿ ರಾಜಸ್ವ ನಿರೀಕ್ಷಕ ಜ್ಞಾನೇಶ್, ಗ್ರಾಮ ಲೆಕ್ಕಾಧಿಕಾರಿ ಜಗದೀಶ್, ವಿಷಯ ನಿರ್ವಾಹಕ ಅಮೃತ್ರಾಜ್ ಭಾಗವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ ಸ್ವಾಗತಿಸಿದರು, ಶಿಕ್ಷಣ ಸಂಯೋಜಕ ಎಂಎಸ್.ಸುರೇಶ್ ವಂದಿಸಿದರು. ದೈಹಿಕ ಶಿಕ್ಷಣಾಧಿಕಾರಿ ಪ್ರಭುಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಕ್ಕೂ ಮುನ್ನ ತಾಯಿ ಭುವನೇಶ್ವರಿ ದೇವಿಯ ಭಾಗಚಿತ್ರವನ್ನು ಜಾನಪದ ಕಲಾತಂಡಗಳ ಮೂಲಕ ತಾಲ್ಲೂಕು ಕ್ರೀಡಾಂಗಣ ಕ್ಕೆ ಮೆರವಣಿಗೆ ಮೂಲಕ ತರಲಾಯಿತು.
ವಿವಿಧ ಶಾಲೆಯ ವಿದ್ಯಾರ್ಥಿಗಳು ನೀಡಿದ ಕನ್ನಡ ನಾಡು ನುಡಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಹನಿಕರ ಗಮನ ಸೆಳೆದವು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯಲ್ಲಿ 125ಕ್ಕೆ 125ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
-ಶ್ರೀನಿವಾಸ್ ಆರ್.
