ಹೈದರಾಬಾದ್: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಗಂಗಾವತಿ ಶಾಸಕ ಜನಾರ್ದನ ರೆಡ್ಡಿಯವರಿಗೆ ಇತ್ತೀಚೆಗೆ ನೀಡಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ರದ್ದುಗೊಳಿಸಿದೆ. ಜೊತೆಗೆ, ಈ ಪ್ರಕರಣದಲ್ಲಿ, ರೆಡ್ಡಿಯವರಿಗೆ ಜಾಮೀನು ಸಹ ನೀಡಿದೆ. ಸಿಬಿಐ ನ್ಯಾಯಾಲಯದಿಂದ ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ಅವರು ಕಳೆದುಕೊಂಡಿರುವ ಶಾಸಕತ್ವ ಸಹ ಅವರಿಗೆ ಮತ್ತೆ ಸಿಗಲಿದೆ.
ಅಂದರೆ, ಪ್ರಕರಣದ ವಿಚಾರಣೆಯು ಇನ್ನು ಮುಂದೆ ಹೈಕೋರ್ಟ್ ನಲ್ಲಿ ಮುಂದುವರಿಯುತ್ತದೆ. ಆದರೆ, ಇದೇ ವರ್ಷ ಮೇ 6ರಂದು ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಏಳು ವರ್ಷಗಳ ಜೈಲು ಶಿಕ್ಷೆಯು ಮಾತ್ರ ರದ್ದಾಗಿದೆ. ಆ ತೀರ್ಪಿನ ವಿರುದ್ಧ ಜನಾರ್ದನ ರೆಡ್ಡಿಯವರು ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ತೆಲಂಗಾಣ ಹೈಕೋರ್ಟ್, ಜೂ. 11ರಂದು ಈ ತೀರ್ಪು ನೀಡಿದೆ.
ಏನಿದು ಪ್ರಕರಣ?
ಆಂಧ್ರ-ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡ ಹೀರೆಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ ಬೆಟ್ಟದಲ್ಲಿ ನಡೆದಿದ್ದ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಓಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ಮತ್ತು ಜನಾರ್ದನರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಈ ಕಂಪನಿಗೆ ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ ಹಾಗೂ ಗಣಿ ಇಲಾಖೆಯಿಂದಲೂ ಅಕ್ರಮ ನಡೆದಿತ್ತು. ಇದರಲ್ಲಿ ರಾಜ್ಯದ 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಪ್ರಕರಣದಲ್ಲಿ ಶ್ರೀನಿವಾಸರೆಡ್ಡಿ, ಜನಾರ್ದನ ರೆಡ್ಡಿ, ಆಪ್ತ ಅಲಿಖಾನ್, ಗಣಿ ಇಲಾಖೆಯ ನಿರ್ದೇಶಕ ರಾಜಗೋಪಾಲ್, ಆಂಧ್ರದ ಮಾಜಿ ಸಚಿವೆ ಸಬಿತಾ ಇಂದ್ರಾರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಕೃಪಾನಂದ, ಶ್ರೀಲಕ್ಷ್ಮೀ ಇದ್ದಾರೆ.
2009ರಲ್ಲಿ ಆಂಧ್ರದ ಅಂದಿನ ಮುಖ್ಯಮಂತ್ರಿ ಕಾಂಗ್ರೆಸ್ನ ರೋಷಯ್ಯ ಅವರು 2009 ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರ ಸೆಪ್ಟೆಂಬರ್ 5 ರಂದು ಜನಾರ್ದನ ರೆಡ್ಡಿ, ಶ್ರೀನಿವಾಸರೆಡ್ಡಿ ಸಿಬಿಐನಿಂದ ಬಂಧಿತರಾಗಿ, ಮೂರುವರೆ ವರ್ಷಗಳ ಕಾಲ ಚಂಚಲಗುಡ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ವಾಸ ಅನುಭವಿಸಿದ್ದರು. ಪ್ರಕರಣದಲ್ಲಿ ಟಪಾಲ್ ಗಣೇಶ ಮತ್ತವರ ಸಹೋದರ ಏಕಾಂಬರಂ, ಪ್ರಮುಖ ಸಾಕ್ಷಿಯಾಗಿದ್ದು, ಈಗಾಗಲೇ ಸಿಬಿಐ 3400 ಕ್ಕೂ ಹೆಚ್ಚು ದಾಖಲೆಗಳ ಪರಿಶೀಲನೆ ಹಾಗೂ 219ಕ್ಕೂ ಹೆಚ್ವು ಸಾಕ್ಷಿಗಳ ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಎಲ್ಲಾ ಆರೋಪಿಗಳು ಜೈಲಿಗೆ ಹೋಗೇ ಹೋಗ್ತಾರೆ ಎಂದು ಟಪಾಲ್ ಗಣೇಶ್ ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಹಿಂದೆ ಜನಾರ್ದನ ರೆಡ್ಡಿ ಹಾಗೂ ಅವರ ಪಟಾಲಂನಿಂದ ಅನುಭವಿಸಿದ್ದ ಕಿರುಕುಳದ ಬಗ್ಗೆಯೂ ಇಂಚಿಂಚಾಗಿ ತೆರೆದಿಟ್ಟಿದ್ದರು.
