ಹಾಸನ: ನಗರದ ಚನ್ನಪಟ್ಟಣ ದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕ ಹೆಚ್.ಪಿ. ಸ್ವರೂಪ ಪ್ರಕಾಶ್ ಇಂದು ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳಿಗೆ ವ್ಯವಸ್ಥಿತವಾಗಿ ನಿಲುಗಡೆಗೆ ಸೂಚನೆ ನೀಡಬೇಕು ಹಾಗೂ ಖಾಸಗಿ ವಾಹನಗಳು ಬಸ್ ನಿಲ್ದಾಣದ ಒಳಗೆ ಬಾರದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಬಸ್ ನಿಲ್ದಾಣದ ಪಕ್ಕದಲ್ಲಿರುವ ರಾಜ ಕಾಲುವೆಯಿಂದ ದುರ್ವಾಸನೆ ಬರುತ್ತಿದ್ದು, ಇದರಿಂದ ಪ್ರಯಾ ಣಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ರಾಜ ಕಾಲುವೆ ಮೇಲೆ ಸ್ಪ್ಯಾಬ್ ಅಳವಡಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಬಸ್ ನಿಲ್ದಾಣದ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಲು ನಗರ ಸಭೆ ಅಧಿಕಾರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ ಸೂಚಿಸಿದರು.
ಬಸ್ ನಿಲ್ದಾಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜೊತೆಗೆ ಶೌಚಾಲಯಗಳನ್ನೂ ಕೂಡ ಶುಚಿಯಾಗಿಟ್ಟುಕೊಳ್ಳಬೇಕು. ಬಸ್ ನಿಲ್ದಾಣದಲ್ಲಿರುವ ಅಂಗಡಿಗಳು ನಿಗದಿತ ದರಕ್ಕಿಂತ ಗ್ರಾಹಕರಿಂದ ಹೆಚ್ಚಿನ ಹಣ ಪಡೆಯುತ್ತಿದ್ದರೆ ಅಂತಹವರ ವಿರುದ್ದ ಕ್ರಮ ಕೈಗೊಳ್ಳಬೇಕು. ಬಸ್ ನಿಲ್ದಾಣದಸುತ್ತಮುತ್ತ ಗಿಡಗಂಟಿಗಳು ಬೆಳೆದಿದ್ದರೆ ಅವುಗಳನ್ನು ತೆರವು ಮಾಡಿ ಶುಚಿಯಾದ ವಾತಾವರಣ ನಿರ್ಮಿಸಬೇಕು ಎಂದು ಅವರು ಸೂಚಿಸಿದರು.
ಇದೇ ವೇಳೆ ಬಸ್ ನಿಲ್ದಾಣದ ಪಕ್ಕದಲ್ಲಿನ ಆಟೋ ಚಾಲಕರು ಕೂಡ ಪ್ರಯಾಣಿಕರು ಆಟೋ ನಿಲ್ದಾಣದ ಪಕ್ಕದಲ್ಲಿ ತಮ್ಮ ದ್ವಿಚಕ್ರ ವಾಹನ ನಿಲ್ಲಿಸುತ್ತಿರುವುದರಿಂದ ತೊಂದರೆಯಾಗುತ್ತಿದೆ ನಮಗೆ ಎಂದು ತಮ್ಮ ಅಳಲು ತೋಡಿಕೊಂಡ ಹಿನ್ನೆಲೆಯಲ್ಲಿ, ಇದಕ್ಕೆ ಪರಿಹಾರ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಕೆಎಸ್ ಆರ್ಟಿಸಿ ಅಧಿಕಾರಿಗಳಿಗೆ ಶಾಸಕರು ಹೇಳಿದರು.
