ತುಮಕೂರು : ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಮಾತನಾಡಿ, ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಅಭಿವೃದ್ಧಿಯ ಹೆಸರಿನಲ್ಲಿ ಮರಗಳ ಮಾರಣ ಹೋಮವಾಗುತ್ತಿದೆ. ಇದರಿಂದ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಪರಿಸರವನ್ನು ಉಳಿಸಿ-ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾದುದು. ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದೊಂದು ಗಿಡ ನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಲು ಮುಂದಾಗಬೇಕು,ಪರಿಸರವಿದ್ದರೆ ಮಾತ್ರ ನಾವು ಎಂದು ಕಿವಿ ಮಾತು ಹೇಳಿದರು.
ಅವರು ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಶನಿವಾರ ತುಮಕೂರು ತಾಲೂಕು ಬೆಳ್ಳಾವಿ ಹೋಬಳಿ ಬಳ್ಳಾಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಏರ್ಪಡಿಸಿದ್ದ “ತಾಯಿಯ ಹೆಸರಿನಲ್ಲಿ ಒಂದು ಗಿಡ-ವನ ಮಹೋತ್ಸವ ಹಾಗೂ ಪರಿಸರ ಅರಿವು ಕಾರ್ಯಕ್ರಮ ”ಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಪರಿಸರ ನಾಶವಾದರೆ ನಮಗೆ ಉಳಿಗಾಲವಿಲ್ಲ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಭಾರತದ ಲೋಕಪಾಲ್ ನ್ಯಾಯಾಂಗ ಸದಸ್ಯ ಗೌರವಾನ್ವಿತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.ಹಳೆಯ ತಲೆಮಾರಿನವರು ನೆಟ್ಟ ಮರಗಳ ನೆರಳಿನಲ್ಲಿ ನಾವಿಂದು ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಿದ್ದೇವೆ. ಈ ಗಿಡ-ಮರಗಳಿಂದ ಪ್ರಾಣಿ-ಪಕ್ಷಿಗಳಿಗೆ ಆಹಾರ ದೊರೆಯುತ್ತಿದೆ. ಜನವಸತಿ ಪ್ರದೇಶಗಳ ವಿಸ್ತರಣೆಗಾಗಿ ಸಕಲ ಜೀವರಾಶಿಗಳ ಬದುಕಿಗೆ ಆಸರೆಯಾಗಿರುವ ಮರಗಳನ್ನು ಕಡಿದು ಹಾಕುತ್ತಿರುವುದು ಶೋಚನೀಯ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ವಿಜ್ಞಾನಿಗಳ ಅಭಿಪ್ರಾಯದಂತೆ ಒಂದು ದೊಡ್ಡ ಮರವು ಒಂದು ಚಿಕ್ಕ ಚೆಕ್ ಡ್ಯಾಂಗೆ ಸಮಾನ. ಮರದ ಬೇರುಗಳು ನೀರನ್ನು ಹಿಡಿದಿಟ್ಟುಕೊಳ್ಳುವುದರಿಂದ ಭೂಮಿ ತಂಪಾಗಿರುತ್ತದೆ ಎಂದ ಅವರು ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯಿಂದ ಪ್ರತೀ ವರ್ಷ ಲಕ್ಷಾಂತರ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಈ ಗಿಡಗಳು ಮರವಾಗಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಕರ್ನಾಟಕ ಉಪ ಲೋಕಾಯುಕ್ತ ಕೆ.ಎನ್. ಫಣಿಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ ಗಿಡ-ಮರಗಳನ್ನು ತಾಯಿಯಂತೆ ಪೋಷಿಸಿ ರಕ್ಷಿಸಬೇಕು.ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಒಂದೊಂದು ಗಿಡ ನೆಟ್ಟು ಪೋಷಿಸಬೇಕೆಂದು ಕರೆ ನೀಡಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ವೃದ್ಧಿಸುವ ನಿಟ್ಟಿನಲ್ಲಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಅರಣ್ಯ ಇಲಾಖೆಯಿಂದ ಪ್ರತಿ ವರ್ಷ ಸುಮಾರು 5 ಲಕ್ಷ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ ಎಂದು ಹೇಳಿದರಲ್ಲದೆ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡ-ಮರಗಳನ್ನು ಬೆಳೆಸುವ ಮೂಲಕ ತುಮಕೂರನ್ನು‘ಹಸಿರು ತುಮಕೂರ’ನ್ನಾಗಿ ರೂಪಿಸಬೇಕೆಂಬ ಸಂಕಲ್ಪ ನಮ್ಮದಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತಕುಮಾರ್,ಪ್ರೊ.ರವಿವರ್ಮಕುಮಾರ್, ಡಿಎಫ್.ಓ.ಅನುಪಮ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ನೂರುನ್ನೀಸ,ತಹಸೀಲ್ದಾರ್ ಪಿ.ಎಸ್.ರಾಜೇಶ್ವರಿ,ಉಪವಿಭಾಗಾಧಿಕಾರಿ ಶ್ರೀಮತಿ ನಾಹಿದಾ ಜ್ಹಮ್ ಜ್ಹಮ್,ಇತರರು ಉಪಸ್ಥಿತರಿದ್ದರು.
– ಕೆ.ಬಿ.ಚಂದ್ರಚೂಡ
