ಬೆಂಗಳೂರು: ರಾಜ್ಯದ ಸಾವಿರಾರು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೆಲವೇ ಆಸ್ಪತ್ರೆಗಳು ಮಾತ್ರ ಫೈರ್ ಸೇಫ್ಟಿ ಪರ್ಮಿಷನ್ಗೆ ಅಗತ್ಯವಾದ ಮಾನದಂಡಗಳನ್ನು ಪೂರೈಸಿವೆ ಎಂಬ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ.
ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ್ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿನ ಒಟ್ಟು 2,878 ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ 14 ಹಾಗೂ 5,850 ಖಾಸಗಿ ಆಸ್ಪತ್ರೆಗಳಲ್ಲಿ ಕೇವಲ 315 ಮಾತ್ರ ಮಾನದಂಡಗಳನ್ನು ಪೂರೈಸಿವೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 2,161 ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 356 ನಗರ ಪಿಎಚ್ಸಿಗಳು, 205 ಸಮುದಾಯ ಆರೋಗ್ಯ ಕೇಂದ್ರಗಳು, 147 ತಾಲ್ಲೂಕು ಆಸ್ಪತ್ರೆಗಳು, 12 ಜಿಲ್ಲಾಸ್ಪತ್ರೆಗಳು ಹಾಗೂ ಬೆಂಗಳೂರು ನಗರದಲ್ಲಿ 3 ಪ್ರಮುಖ ಸರ್ಕಾರಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ತಿಳಿಸಿದರು.
ನ್ಯಾಷನಲ್ ಬಿಲ್ಡಿಂಗ್ ಕೋಡ್ ಪ್ರಕಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಒಂದೇ ರೀತಿಯ ಫೈರ್ ಸೇಫ್ಟಿ ನಿಯಮಗಳು ಅನ್ವಯಿಸುತ್ತವೆ ಎಂದು ಸಚಿವರು ಸ್ಪಷ್ಟಪಡಿಸಿದರು.
