ಬೆಂಗಳೂರು: ಶೇಷಾದ್ರಿಪುರಂ ಕಾಲೇಜಿನ ಕನ್ನಡ ಉಪನ್ಯಾಸಕ, ಖ್ಯಾತ ಸಾಹಿತಿ ಮತ್ತು ಸಾಂಸ್ಕೃತಿಕ ಚಿಂತಕರಾದ ಡಾ. ಎಸ್. ರಾಮಲಿಂಗೇಶ್ವರ (ಸಿಸಿರಾ) ಅವರು, ಬೆಂಗಳೂರಿನ ಎನ್.ಆರ್. ಕಾಲೋನಿಯಲ್ಲಿ ಇರುವ ಪ್ರತಿಷ್ಠಿತ ಬಿಎಂಶ್ರೀ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿಯ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ.
ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷ ಡಾ. ಬೈರಮಂಗಲ ರಾಮೇಗೌಡ ಹಾಗೂ ಕಾರ್ಯದರ್ಶಿ ಡಾ. ಶಾಂತರಾಜು ಅವರು ಪತ್ರಿಕಾ ಪ್ರಕಟಣೆಯ ಮೂಲಕ ಈ ಮಾಹಿತಿಯನ್ನು ತಿಳಿಸಿದ್ದಾರೆ.
ಸಾಹಿತಿಗಳಾಗಿ, ಅವಿಭಜಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಸಿಸಿರಾ ಅವರು, 1998ರಲ್ಲಿ “ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್” ಸ್ಥಾಪಿಸಿ ಕನ್ನಡಪರ ಚಟುವಟಿಕೆಗಳು ಹಾಗೂ ಮಹಾತ್ಮ ಗಾಂಧೀಜಿ, ವಿವೇಕಾನಂದರ ವಿಚಾರಧಾರೆಗಳ ಪ್ರಸಾರ ಕಾರ್ಯದಲ್ಲಿ ಕ್ರಿಯಾಶೀಲರಾಗಿದ್ದಾರೆ.

