ಹಾಸನ: ನಗರದ ಹಿಮ್ಸ್ ಆವರಣದಲ್ಲಿ ನಿರ್ಮಾಣವಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ತಕ್ಷಣ ಮೂಲಭೂತ ಸೌಲಭ್ಯ, ಯಂತ್ರೋಪಕರಣ, ವೈದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಿ ಶೀಘ್ರ ಕಾರ್ಯಾರಂಭ ಮಾಡಬೇಕೆಂದು ಆಗ್ರಹಿಸಿ, ಆಗಸ್ಟ್ 15ರಂದು ಆಸ್ಪತ್ರೆಯ ನೂತನ ಕಟ್ಟಡದ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಆರ್ಎಸ್ ಜಿಲ್ಲಾಧ್ಯಕ್ಷ ಹೆಚ್.ಆರ್. ನವೀನ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಸಬಲೀಕರಣಕ್ಕಾಗಿ ನಾವು ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದೇವೆ. ಸ್ವಾತಂತ್ರ್ಯ ದಿನಾಚರಣೆಯಂದು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವ ನಿರ್ಧಾರ ಕೈಗೊಂಡಿದ್ದೇವೆ. ನೂತನವಾಗಿ ಜಿಲ್ಲಾ ಉಸ್ತುವಾರಿ ಹೊಣೆ ಹೊತ್ತಿರುವ ಕೃಷ್ಣ ಬೈರೇಗೌಡ ಅವರು ಸ್ಥಳಕ್ಕೆ ಬಂದು ಜನರ ಬೇಡಿಕೆಗೆ ಸ್ಪಂದಿಸಬೇಕು” ಎಂದು ಹೇಳಿದರು.
ನವೀನ್ ಕುಮಾರ್, “ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ಆರಂಭಿಸುವುದು ಅವಶ್ಯಕ. ನಮ್ಮ ಹೋರಾಟಕ್ಕೆ ನಗರ ಹಾಗೂ ಜಿಲ್ಲೆಯ ಜನರು ಬೆಂಬಲ ನೀಡಿ ಯಶಸ್ವಿಗೊಳಿಸಬೇಕು. ಬೇಡಿಕೆ ಪೂರೈಸದಿದ್ದರೆ ಹೋರಾಟ ಹಂತ ಹಂತವಾಗಿ ಮುಂದುವರಿಯಲಿದೆ” ಎಂದು ಎಚ್ಚರಿಸಿದರು.
ಇದೇ ವೇಳೆ, ಜಿಲ್ಲೆಯ ಜನರ ಆರೋಗ್ಯ ಮತ್ತು ಇತ್ತೀಚೆಗೆ ಹೆಚ್ಚುತ್ತಿರುವ ಲೈಂಗಿಕ ಅಪರಾಧಗಳ ಹಿನ್ನೆಲೆಯಲ್ಲಿ “ಲೈಂಗಿಕತೆ ಪ್ರಚಾರ ಆಂದೋಲನ” ಕೂಡ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಮಾದಿಗ ದಂಡೋರ ಹೋರಾಟ ಸಮಿತಿಯ ವಿಜಯಕುಮಾರ್, “ಜಿಲ್ಲೆಯ ಎಲ್ಲ ಶಾಸಕರು ಮತ್ತು ಸಂಸದರು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಈ ವಿಷಯದಲ್ಲಿ ಧ್ವನಿ ಎತ್ತಬೇಕು” ಎಂದು ಒತ್ತಾಯಿಸಿದರು.
ಹಿರಿಯ ಪತ್ರಕರ್ತ ಆರ್.ಪಿ. ವೆಂಕಟೇಶ್ಮೂರ್ತಿ, “ಕಾವೇರಿ ಆರತಿ ಮುಂತಾದ ಕಾರ್ಯಕ್ರಮಗಳಿಗೆ ಸರ್ಕಾರ ಕೋಟಿ ಕೋಟಿ ರೂ. ವೆಚ್ಚ ಮಾಡುವ ಬದಲು ಸರ್ಕಾರಿ ಆಸ್ಪತ್ರೆ ಮತ್ತು ಶಾಲೆಗಳ ಅಭಿವೃದ್ಧಿಗೆ ಹಣ ವಿನಿಯೋಗಿಸಬೇಕು” ಎಂದು ಆಗ್ರಹಿಸಿದರು.
ಸುದ್ದಿಗೋಷ್ಟಿಯಲ್ಲಿ ಮಮತಾ ಶಿವು, ಚಿನ್ನೇನಹಳ್ಳಿ ಸ್ವಾಮಿ, ಸಮೀರ್ ಅಹಮದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯ: ಶಾಲೆಗೆ ಹೋಗದ ಬಾಲಕಿ, ನ್ಯಾಯಾಧೀಶರು ಭೇಟಿ
