ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಕ್ಲೀನ್ ಚಿಟ್ ಸಿಕ್ಕಿದೆ. ಈ ಕುರಿತು ಏಕಸದಸ್ಯರ ಪಿಎನ್ ದೇಸಾಯಿ ಆಯೋಗ ಸಲ್ಲಿಸಿದ ವರದಿಯನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ.
ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಆರೋಪಗಳ ತನಿಖೆಗಾಗಿ ಸರ್ಕಾರವು ಏಕಸದಸ್ಯರ ಆಯೋಗವನ್ನು ರಚಿಸಿತ್ತು. ಪಿಎನ್ ದೇಸಾಯಿ ಅವರ ನೇತೃತ್ವದ ಆಯೋಗವು ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ಯಾವುದೇ ರೀತಿಯ ಅಕ್ರಮದಲ್ಲಿ ತೊಡಗಿಸಿಕೊಳ್ಳಲಿಲ್ಲ ಎಂಬ ತೀರ್ಮಾನಕ್ಕೆ ಬಂದಿದೆ. ಇದರ ವರದಿಗೆ ಸಂಪುಟ ಇಂದು ಅಧಿಕೃತವಾಗಿ ಅನುಮೋದನೆ ನೀಡಿದೆ.
ಡಿಕೆ ಬೆಂಬಲಿಗರ 11 ಕ್ರಿಮಿನಲ್ ಕೇಸು ವಾಪಸ್
ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧ ದಾಖಲಾಗಿದ್ದ 11 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ.
2019ರಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ED) ಬಂಧಿಸಿತ್ತು. ಅವರ ಬಂಧನದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆ ಬೆಂಬಲಿಗರು ಭಾಗವಹಿಸಿದ್ದರು. ಆ ಪ್ರತಿಭಟನೆಯಲ್ಲಿ ಸಿಲುಕಿದವರ ವಿರುದ್ಧ 62ಕ್ಕೂ ಹೆಚ್ಚು ಕ್ರಿಮಿನಲ್ ಕೇಸು ದಾಖಲಾಗಿದ್ದು, ಇವುಗಳಲ್ಲಿ 11 ಕೇಸುಗಳನ್ನು ಕೈಬಿಡಲು ಇಂದು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ.
