ಬೆಂಗಳೂರು: ಸಾಹಸ ಸಿಂಹ ದಿ. ವಿಷ್ಣುವರ್ಧನ್ ಹಾಗೂ ಅಭಿನಯ ಸರಸ್ವತಿ ದಿ. ನಟಿ ಬಿ. ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಘೋಷಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಕೆ. ಪಾಟೀಲ್, “ನಟ ವಿಷ್ಣುವರ್ಧನ್ ಮತ್ತು ನಟಿ ಬಿ. ಸರೋಜಾ ದೇವಿ ಅವರ ಕಲಾ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಅವರಿಗೆ ಕರ್ನಾಟಕ ರತ್ನ ಗೌರವ ನೀಡಲು ತೀರ್ಮಾನಿಸಲಾಗಿದೆ” ಎಂದರು.
ಇದೇ ವೇಳೆ ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಧಾರವನ್ನು ಸಹ ಸಚಿವ ಸಂಪುಟ ಕೈಗೊಂಡಿದೆ ಎಂದು ಅವರು ತಿಳಿಸಿದರು.
ಈ ಪ್ರಶಸ್ತಿಗಳನ್ನು ನವೆಂಬರ್ 1ರಂದು, ರಾಜ್ಯೋತ್ಸವದಂದು, ಬೆಂಗಳೂರಿನಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.
