ಬೆಂಗಳೂರು, ದೇವನಹಳ್ಳಿ, ಡಿ.13: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ನೂತನ ಕಚೇರಿ ಕಟ್ಟಡ ಹಾಗೂ ಕುಂದಾಣ ಗ್ರಾಮ ಪಂಚಾಯಿತಿಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇವನಹಳ್ಳಿ ಪಟ್ಟಣದಲ್ಲಿ ಆತಂಕಕಾರಿ ಘಟನೆ ನಡೆದಿದೆ.
ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರು ಹಾಗೂ ಇತರ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಸಂದರ್ಭ, ನೂತನ ಕಟ್ಟಡ ಅವರಣದ ಬಳಿ, ಅಂಬಿಕಾ ಲೇಔಟ್ – ಸೂಲಿಬೆಲೆ ರಸ್ತೆ, ದೇವನಹಳ್ಳಿ ಟೌನ್ನಲ್ಲಿ ನಿಂತಿದ್ದ ಮಹೇಂದ್ರ ಬೋಲೆರೋ ಕಾರು ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿಯತೊಡಗಿದೆ.
ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಗೊಂದಲ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಕಾರಿನಲ್ಲಿ ಬೆಂಕಿ ಹೊತ್ತಿಕೊಳ್ಳಲು ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಘಟನೆಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಜನರಲ್ಲಿ ಆತಂಕ ಉಂಟಾದರೂ, ಭದ್ರತಾ ವ್ಯವಸ್ಥೆ ಬಿಗಿಗೊಳಿಸಿ ಕಾರ್ಯಕ್ರಮವನ್ನು ಮುಂದುವರೆಸಲಾಯಿತು.
