ಟಿ.ನರಸೀಪುರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಡಿಸೆಂಬರ್ 21ರಿಂದ 24ರವರೆಗೆ ರಾಷ್ಟ್ರವ್ಯಾಪಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ. ರವಿಕುಮಾರ್ ಮನವಿ ಮಾಡಿದ್ದಾರೆ.
ಸದರಿ ಕಾರ್ಯಕ್ರಮಕ್ಕೆ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಬೆಳಗ್ಗೆ 9.00 ಗಂಟೆಗೆ ಜಿ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರು ಮಕ್ಕಳಿಗೆ ಪೋಲಿಯೋ ಹನಿ ನೀಡುವ ಮೂಲಕ ಅಧಿಕೃತ ಚಾಲನೆ ನೀಡಲಿದ್ದಾರೆ.
ತಾಲ್ಲೂಕಿನಲ್ಲಿ 0ರಿಂದ 5 ವರ್ಷದೊಳಗಿನ ಒಟ್ಟು 18,810 ಮಕ್ಕಳಿದ್ದು, ಅವರಿಗಾಗಿ 234 ಹಳ್ಳಿಗಳಲ್ಲಿ 181 ಪೋಲಿಯೋ ಬೂತ್ಗಳನ್ನು ತೆರೆಯಲಾಗಿದೆ. ಜೊತೆಗೆ 5 ಟ್ರಾನ್ಸಿಟ್ (ಚಲಿಸುವ) ಬೂತ್ಗಳನ್ನು ಸ್ಥಾಪಿಸಲಾಗಿದ್ದು, ಈ ಕಾರ್ಯಕ್ರಮದ ಯಶಸ್ಸಿಗಾಗಿ ಒಟ್ಟು 724 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ. ರವಿಕುಮಾರ್ ಅವರು, ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳನ್ನು ಸಮೀಪದ ತಮ್ಮ ತಮ್ಮ ಗ್ರಾಮಗಳಲ್ಲಿ ತೆರೆಯಲಾಗಿರುವ ಪೋಲಿಯೋ ಬೂತ್ಗಳಿಗೆ ಕರೆದುಕೊಂಡು ಹೋಗಿ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದ್ದಾರೆ.
ಪೋಲಿಯೋ ಮುಕ್ತ ಭಾರತ ಗುರಿ ಸಾಧನೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
– ಎಂ.ನಾಗೇಂದ್ರ ಕುಮಾರ್
