ಚಿಕ್ಕಮಗಳೂರು: ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಕಾಫಿನಾಡು ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಎತ್ತಿನಭುಜ, ದೇವರಮನೆ ಗುಡ್ಡ ಸೇರಿದಂತೆ ವಿವಿಧ ಜಲಪಾತಗಳನ್ನು ಒಳಗೊಂಡಂತೆ ಒಟ್ಟು 22 ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ. ಈ ನಿರ್ಬಂಧವು ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ.
ಎಲ್ಲಾ ಪ್ರವಾಸಿ ತಾಣಗಳು ಹಾಗೂ ಅವುಗಳಿಗೆ ಸಂಪರ್ಕಿಸುವ ಮಾರ್ಗಗಳಲ್ಲಿ ಕಠಿಣ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಮದ್ಯಪಾನದ ಮತ್ತಿನಲ್ಲಿ ಸಂಭ್ರಮಿಸುವ ಸಂದರ್ಭದಲ್ಲಿ ಯಾವುದೇ ಅನಾಹುತ ಸಂಭವಿಸಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅವರ ಮನವಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಕುರಿತು ನಿರ್ಬಂಧಾತ್ಮಕ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಜಿಲ್ಲಾಡಳಿತದ ಸೂಚನೆಗಳಿಗೆ ಸಹಕರಿಸಿ, ಶಾಂತಿ ಹಾಗೂ ಸುರಕ್ಷತೆಯನ್ನು ಕಾಪಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ.



[…] […]