ಕೆ.ಆರ್.ಪೇಟೆ,ಜ.05: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿಯೇ ಅತಿ ಹೆಚ್ಚು ವರ್ಷಗಳ ಕಾಲ ದೀರ್ಘಾವದಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ ಕೀರ್ತಿಗೆ ಭಾಜನರಾಗಿದ್ದು, ಇದರ ಅಂಗವಾಗಿ ಜ.06ರಂದು ಕೆ.ಆರ್.ಪೇಟೆಯಲ್ಲಿ ವಿಜಯೋತ್ಸವ ಹಾಗೂ ಸಿಹಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ದೇವರಾಜು ತಿಳಿಸಿದರು.
ಅವರು ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಹಾಗೂ ಅಹಿಂದ ವರ್ಗಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಇದೂವರೆವಿಗೂ 7ವರ್ಷ 239ದಿನಗಳ ಕಾಲ ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿ ಅತಿ ಹೆಚ್ಚು ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುವ ಮೂಲಕ ಇತಿಹಾಸ ದಾಖಲೆ ಬರೆದಿದ್ದರು.

ಆದರೆ ಈಗಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜ.06ಕ್ಕೆ 7ವರ್ಷ 240ದಿನಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಮೂಲಕ ಡಿ.ದೇವರಾಜು ಅರಸು ಅವರ ದಾಖಲೆಯನ್ನು ಮುರಿದಿದ್ದಾರೆ. ಅರಸು ಅವರಿಗಿಂತ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವ ಮೂಲಕ ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಕೀರ್ತಿಗೆ ಭಾಜನರಾಗಿ ಇತಿಹಾಸ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಅಹಿಂದ ವರ್ಗಗಳ ಒಕ್ಕೂಟ, ತಾಲ್ಲೂಕು ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಹಾಗೂ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಜ.06ರಂದು ಮಂಗಳವಾರ ಬೆಳಿಗ್ಗೆ 10ಗಂಟೆಗೆ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿ ವಿವಿಧ ದೇವಾಲಯಗಳಲ್ಲಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಅರ್ಚನೆ, ಅಭಿಷೇಕ, ವಿಶೇಷ ಪೂಜೆ ಸಲ್ಲಿಸಲಾಗುವುದು ಹಾಗಾಗಿ ಸಿದ್ದರಾಮಯ್ಯ ಅಭಿಮಾನಿಗಳು, ಅಹಿಂದ ಮುಖಂಡರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಕೋಡಿಮಾರನಹಳ್ಳಿ ದೇವರಾಜು ಮನವಿ ಮಾಡಿದರು.
ಈ ಸಭೆಯಲ್ಲಿ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್, ಪುರಸಭಾ ಸದಸ್ಯ ಕೆ.ಆರ್.ರವೀಂದ್ರಬಾಬು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಟಿ.ಎನ್.ದಿವಾಕರ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ಶ್ಯಾಮಣ್ಣ, ಸಣ್ಣನಿಂಗೇಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲೋಲಾಕ್ಷಿ, ಮೀನಾಕ್ಷಿರಮೇಶ್, ವಿನೂತ ಸುರೇಶ್, ಗ್ಯಾರಂಟಿ ಸಮಿತಿ ಸದಸ್ಯರಾದ ಕೆ.ಎಸ್.ಆರ್.ಟಿ.ಸಿ ಶಿವಣ್ಣ, ಶಿವಮ್ಮ, ಮುಖಂಡರಾದ ರಾಯಪ್ಪ, ಸಾಸಲು ಈರಪ್ಪ, ಜವರಯ್ಯ ಸೇರಿದಂತೆ ಇತರರು ಹಾಜರಿದ್ದರು.
– ಶ್ರೀನಿವಾಸ್ ಆರ್.
