ಹಾಸನ: ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ National Observance in India ಹಾಗೂ ರೋಟರಿ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಸಂಚಾರಿ ನಿಯಮಗಳು ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕ್ವಿಜ್ ಕಾರ್ಯಕ್ರಮವನ್ನು ಹಾಸನದ ಕಿರಣ್ ಪ್ರೌಢಶಾಲೆಯಲ್ಲಿ ಶನಿವಾರ (17.01.2026) ಬೆಳಿಗ್ಗೆ 9 ಗಂಟೆಗೆ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳಿಗೆ ಸಂಬಂಧಿಸಿದ ಹಲವಾರು ಪ್ರಶ್ನೋತ್ತರಗಳ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷ ರೋ. ವಜ್ರಕುಮಾರ್ ಎಚ್.ಡಿ. ಅವರು ಪ್ರಸ್ತಾವಿಕವಾಗಿ ಮಾತನಾಡಿ, ರೋಟರಿ ರಸ್ತೆ ಸುರಕ್ಷತಾ ಸಪ್ತಾಹದ ಧ್ಯೇಯೋದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ಶಾಲಾ ಮಕ್ಕಳಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳು ಅತ್ಯಂತ ಪ್ರಯೋಜನಕಾರಿಯಾಗಿದ್ದು, ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತವೆ ಎಂದು ಅವರು ಹೇಳಿದರು.
ಸನ್ ರೈಸ್ ಕ್ಲಬ್ ಕಾರ್ಯದರ್ಶಿ ಹಾಗೂ ವಕೀಲರಾದ ರೋ. ಕೆ.ಎಸ್. ಯೋಗೇಶ್ ಅವರು ಸಂಚಾರ ನಿಯಮಗಳ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಿರಣ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಆನಂದ್ ಅವರು ಮಾತನಾಡಿ, ವಿದ್ಯಾರ್ಥಿಗಳ ಹಿತಕ್ಕಾಗಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ರೋಟರಿ ಸಂಸ್ಥೆಯ ಕಾಳಜಿಯನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ನಿರ್ದೇಶಕರಾದ ರೋ. ರಾಜಣ್ಣ, ರೋ. ಸಿದ್ದನಂಜಪ್ಪ, ಜಂಟಿ ಕಾರ್ಯದರ್ಶಿ ರೋ. ಶಶೀಂದ್ರನಾಥನ್, ರೋ. ರಾಜೇಶ್ ಸೇರಿದಂತೆ ಹಲವಾರು ಸದಸ್ಯರು ಉಪಸ್ಥಿತರಿದ್ದರು. ಜೊತೆಗೆ ಕಿರಣ್ ಪ್ರೌಢಶಾಲೆಯ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಭಾಗವಹಿಸಿದ್ದರು.
ಶಿಕ್ಷಕಿ ಹೊನ್ನಗಂಗಾ ಭೋವಿ ಅವರು ಕ್ವಿಜ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಿಕ್ಷಕ ಲಿಂಗೇಶ್ ಕಾರ್ಯಕ್ರಮ ನಿರೂಪಿಸಿದರು. ಕೆಂಪು ಮನೆ, ಹಸಿರು ಮನೆ, ಹಳದಿ ಮನೆ ಮತ್ತು ನೀಲಿ ಮನೆ ಎಂಬ ವಿದ್ಯಾರ್ಥಿ ತಂಡಗಳು ಕ್ವಿಜ್ನಲ್ಲಿ ಪಾಲ್ಗೊಂಡಿದ್ದು, ಹಳದಿ ಮನೆಯ ತಂಡ ಪ್ರಥಮ ಬಹುಮಾನ ಹಾಗೂ ಕೆಂಪು ಮನೆಯ ತಂಡ ದ್ವಿತೀಯ ಬಹುಮಾನ ಪಡೆದುಕೊಂಡವು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದ ಅಂತ್ಯದಲ್ಲಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಕಾರ್ಯಕಾರಿಣಿ ಮಂಡಳಿ ಸದಸ್ಯರುಗಳು ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು.
