ಹಾಸನ: ಮುಂಬರುವ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಎನ್ಡಿಎ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಪಿ. ಸ್ಟರೂನ್ ಪ್ರಕಾಶ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಭೂವನಹಳ್ಳಿಯಲ್ಲಿ ನಡೆಯುತ್ತಿರುವ ಜೆಡಿಎಸ್ ಜನತಾ ಸಮಾವೇಶದಲ್ಲಿ ಪ್ರಸ್ತಾವಿಕ ಭಾಷಣ ಮಾಡಿದರು. ಹಾಸನ ಜಿಲ್ಲೆಯಲ್ಲಿ ಕಂಡುಬರುವ ಅಭಿವೃದ್ಧಿಗೆ ಜೆಡಿಎಸ್ವೇ ಕಾರಣ ಎಂದು ಅವರು ಹೇಳಿದರು. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಶಾಶ್ವತ ಅಭಿವೃದ್ಧಿ ಕಾರ್ಯಗಳು ಜೆಡಿಎಸ್ ಸರ್ಕಾರದ ಅವಧಿಯಲ್ಲೇ ನಡೆದಿವೆ. ಸರ್ಕಾರೀ ಇಂಜಿನಿಯರಿಂಗ್ ಕಾಲೇಜು, ಬಸ್ ನಿಲ್ದಾಣ, ನ್ಯಾಯಾಲಯ, ಮಹಿಳಾ ಕಾಲೇಜುಗಳು, ವಿದ್ಯಾರ್ಥಿ ಹಾಸ್ಟೆಲ್ಗಳು ಸೇರಿದಂತೆ ಹಲವು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಜೆಡಿಎಸ್ ಸರ್ಕಾರ ಕೈಗೊಂಡಿದೆ ಎಂದು ವಿವರಿಸಿದರು.
ಹಾಸನ ಜಿಲ್ಲೆಗೆ ಕಾಂಗ್ರೆಸ್ ಸರ್ಕಾರದ ಕೊಡುಗೆ ಶೂನ್ಯವಾಗಿದೆ ಎಂದು ಟೀಕಿಸಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರೂ ಜಿಲ್ಲೆಗೆ ಯಾವುದೇ ಮಹತ್ವದ ಕೊಡುಗೆ ನೀಡಿಲ್ಲ. “ಆದರೂ ಜಿಲ್ಲೆಯಲ್ಲಿ ಎರಡು ಸಮಾವೇಶಗಳನ್ನು ನಡೆಸಿರುವುದು ಯಾವ ಪುರುಷಾರ್ಥಕ್ಕಾಗಿ ಎಂಬುದನ್ನು ಅವರೇ ಹೇಳಬೇಕು,” ಎಂದು ಪ್ರಶ್ನಿಸಿದರು.
ಈ ಸಮಾವೇಶದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ. ರೇವಣ್ಣ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
