ಬೆಂಗಳೂರು, ಫೆಬ್ರವರಿ 03: ಕರ್ನಾಟಕ ರಾಜ್ಯದ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ವಿದ್ಯಾ ವಿಕಾಸ ಯೋಜನೆ ಅಡಿಯಲ್ಲಿ ಶಾಲಾ ಮಕ್ಕಳಿಗೆ ಉಚಿತವಾಗಿ ಪಠ್ಯಪುಸ್ತಕಗಳ ಜೊತೆಗೆ ನೋಟ್ಬುಕ್ಗಳನ್ನೂ ವಿತರಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ.
2026–27ನೇ ಶೈಕ್ಷಣಿಕ ಸಾಲಿಗೆ 1ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲು ಅನುಮೋದನೆ ನೀಡಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಶುಭಮಂಗಳಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ನಿರ್ಧಾರದಿಂದ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಸುಮಾರು 61 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇದೇ ಮೊದಲ ಬಾರಿಗೆ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜೊತೆಗೆ ನೋಟ್ಬುಕ್ಗಳನ್ನು ಉಚಿತವಾಗಿ ವಿತರಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
290.46 ಕೋಟಿ ರೂ. ಅನುದಾನಕ್ಕೆ ಅನುಮೋದನೆ
ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಮತ್ತು 1ರಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕ ವಿತರಣೆ ಸಂಬಂಧ ಶಿಕ್ಷಣ ಇಲಾಖೆ ಸರ್ಕಾರಕ್ಕೆ ₹30.83 ಕೋಟಿ ಮೊತ್ತದ ಪ್ರಸ್ತಾವನೆ ಸಲ್ಲಿಸಿತ್ತು. ಸರ್ಕಾರ ಈ ಪ್ರಸ್ತಾವನೆಯನ್ನು ಅಂಗೀಕರಿಸಿ, ಒಟ್ಟು ₹290.46 ಕೋಟಿ ಅನುದಾನವನ್ನು ಶಾಲಾ ಶಿಕ್ಷಣ ಇಲಾಖೆಗೆ ಮಂಜೂರು ಮಾಡಿದೆ.
ಇದರಿಂದ ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ನೋಟ್ಬುಕ್ಗಳನ್ನು ವಿತರಿಸಲು ಇಲಾಖೆ ಸಿದ್ಧತೆ ಆರಂಭಿಸಿದೆ.
ಗುಣಮಟ್ಟಕ್ಕೆ ರಾಜಿ ಇಲ್ಲ – ಎಚ್ಚರಿಕೆ
ಆದೇಶದಲ್ಲಿ ಪಠ್ಯಪುಸ್ತಕಗಳ ಕಾಗದ ಹಾಗೂ ಮುದ್ರಣ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಹೆಚ್ಚುವರಿ ಪುಸ್ತಕಗಳ ಬೇಡಿಕೆ ಸಲ್ಲಿಸಿ ಅಕ್ರಮ ನಡೆಯದಂತೆ ಎಚ್ಚರಿಕೆ ನೀಡಲಾಗಿದ್ದು, ಸರ್ಕಾರದ ಹಣ ದುರುಪಯೋಗವಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪೋಷಕರ ಹೊರೆ ಕಡಿತ
ಇದುವರೆಗೂ 1ರಿಂದ 10ನೇ ತರಗತಿ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಶಾಲೆಯಲ್ಲೇ ನೀಡಲಾಗುತ್ತಿತ್ತು. ಆದರೆ ನೋಟ್ಬುಕ್ಗಳನ್ನು ಪೋಷಕರೇ ಖರೀದಿಸಬೇಕಾಗಿತ್ತು. ಇದೀಗ 1ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ನೋಟ್ಬುಕ್ ಎರಡನ್ನೂ ಉಚಿತವಾಗಿ ನೀಡುತ್ತಿರುವುದರಿಂದ ಪೋಷಕರ ಆರ್ಥಿಕ ಹೊರೆ ಗಮನಾರ್ಹವಾಗಿ ಇಳಿಕೆಯಾಗಲಿದೆ.
ಆದೇಶದ ಪ್ರಮುಖ ಅಂಶಗಳು
- ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ದ್ವಿಭಾಷಾ ಬಾಲ ಚೇತನ ಚಟುವಟಿಕೆ ಪುಸ್ತಕ
- 4ರಿಂದ 9ನೇ ತರಗತಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅಭ್ಯಾಸ ಪುಸ್ತಕ
- ಪೂರ್ವ ಪ್ರಾಥಮಿಕದಿಂದ 12ನೇ ತರಗತಿಯವರೆಗೆ ದಿನಚರಿ ಪುಸ್ತಕ
- 1ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕ ವಿತರಣೆ
ಕೆಟಿಪಿಪಿ ಕಾಯ್ದೆ–1999ರ ನಿಯಮಗಳಂತೆ ಪಾರದರ್ಶಕ ಟೆಂಡರ್ ಪ್ರಕ್ರಿಯೆ ಮೂಲಕ ಕರ್ನಾಟಕ ಪುಸ್ತಕ ಸಂಘದ ಮೂಲಕ ಮುದ್ರಣೆ ಮತ್ತು ವಿತರಣೆಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಒಟ್ಟು ₹264.62 ಕೋಟಿ ವೆಚ್ಚದಲ್ಲಿ ವಿದ್ಯಾ ವಿಕಾಸ ಯೋಜನೆ ಅಡಿಯಲ್ಲಿ ಪುಸ್ತಕ ವಿತರಣೆ ಮಾಡಲಾಗುತ್ತಿದ್ದು, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಹೊಸ ಕಾರ್ಯಕ್ರಮಗಳಿಗೆ ₹25.84 ಕೋಟಿ ಅನುದಾನ ಮೀಸಲಿಡಲಾಗಿದೆ. ಶೈಕ್ಷಣಿಕ ವರ್ಷದ ಆರಂಭದಲ್ಲೇ ಪುಸ್ತಕ ವಿತರಣೆ ಕಡ್ಡಾಯವಾಗಿದ್ದು, ಎಸ್ಎಟಿಎಸ್ ಮೂಲಕ ಶಾಲೆಗಳಿಂದ ಬೇಡಿಕೆ ಮಾಹಿತಿ ಸಂಗ್ರಹಿಸಿ ದಾಖಲು ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
