ಬೇಡಿಕೆ ಈಡೇರಿಸದಿದ್ದರೆ ಮಾರ್ಚ್ 11ರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರ ಎಚ್ಚರಿಕೆ
ಹಾಸನ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸದಿದ್ದರೆ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಎಚ್ಚರಿಕೆ ನೀಡಿವೆ.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪದಾಧಿಕಾರಿಗಳು, ರಾಜ್ಯದ ಸುಮಾರು 6 ಕೋಟಿ ಜನರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ಆರೋಗ್ಯ ಇಲಾಖೆಯ ಸುಮಾರು 36,397 ಅಧಿಕಾರಿ-ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ ಸಿಬ್ಬಂದಿ ಸಂಖ್ಯೆ ಕಡಿಮೆಯಾಗುತ್ತಿದ್ದು, ಖಾಲಿ ಹುದ್ದೆಗಳು ಭರ್ತಿಯಾಗದೇ ಇರುವುದರಿಂದ ಕೆಲಸದ ಒತ್ತಡ ಹೆಚ್ಚಾಗಿದೆ ಎಂದು ಹೇಳಿದರು.
ವೈದ್ಯಾಧಿಕಾರಿಗಳ ಸಂಘ ಮತ್ತು ನೌಕರರ ಸಂಘವು ಆರೋಗ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಹಲವು ಬಾರಿ ಸಭೆ ನಡೆಸಿ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಕೆಲ ಸಭೆಗಳ ನಿರ್ಣಯಗಳನ್ನು ದಾಖಲಿಸದೇ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸುವುದು, ಅರ್ಹ ವೈದ್ಯರು ಮತ್ತು ಸಿಬ್ಬಂದಿಗೆ ಮುಂಬಡ್ತಿ ನೀಡುವುದು, ಸೇವಾನಿರತ ವೈದ್ಯರಿಗೆ ಉನ್ನತ ವ್ಯಾಸಂಗದ ಅವಕಾಶ ಕಲ್ಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘ ಮುಂದಿಟ್ಟಿದೆ ಎಂದು ತಿಳಿಸಿದರು.
ಆಸ್ಪತ್ರೆಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಔಷಧಿ ಮತ್ತು ವೈದ್ಯಕೀಯ ಸಲಕರಣೆಗಳ ಸರಬರಾಜು ಆಗುತ್ತಿಲ್ಲ. ಇದರ ಪರಿಣಾಮ ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದು ಕಷ್ಟವಾಗುತ್ತಿದ್ದು, ವೈದ್ಯರು ಹಾಗೂ ಸಿಬ್ಬಂದಿಗಳ ಮೇಲೆ ಒತ್ತಡ ಹೆಚ್ಚುತ್ತಿದೆ ಎಂದು ಹೇಳಿದರು.
ಆರೋಗ್ಯ ಇಲಾಖೆಯಲ್ಲಿ ಸುಮಾರು ಶೇ.40ರಷ್ಟು ಹುದ್ದೆಗಳು ಖಾಲಿಯಾಗಿದ್ದು, ಜನಸಂಖ್ಯೆ ಹೆಚ್ಚಾದರೂ ಹೊಸ ಹುದ್ದೆಗಳನ್ನು ಸೃಜಿಸಲಾಗಿಲ್ಲ. ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂಸಿಎಚ್ ತಜ್ಞ ವೈದ್ಯರನ್ನು ಬೇರೆಡೆ ವರ್ಗಾವಣೆ ಮಾಡುವ ಕ್ರಮದಿಂದ ಗರ್ಭಿಣಿಯರು ಹಾಗೂ ಮಕ್ಕಳಿಗೆ ತಜ್ಞ ಚಿಕಿತ್ಸೆ ಪಡೆಯಲು ತೊಂದರೆ ಆಗಲಿದೆ. ಇದರಿಂದ ತಾಯಿ-ಶಿಶು ಮರಣ ಪ್ರಮಾಣ ಹೆಚ್ಚಾಗುವ ಆತಂಕವಿದೆ ಎಂದು ಹೇಳಿದರು.
ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು ಮತ್ತು ನೌಕರರಿಗೆ ಸೇವಾ ಭದ್ರತೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಇದ್ದಂತೆ ಗುತ್ತಿಗೆ ವೈದ್ಯರು ಮತ್ತು ಸಿಬ್ಬಂದಿಯನ್ನು ಖಾಯಂಗೊಳಿಸಬೇಕು ಹಾಗೂ ಅವರ ಸೇವಾವಧಿಯನ್ನು ಪಿಂಚಣಿ ಸೌಲಭ್ಯಕ್ಕೆ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಕೆಲವು ಆದೇಶಗಳು ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಹೆಚ್ಚುವರಿ ಒತ್ತಡ ಉಂಟುಮಾಡುತ್ತಿದ್ದು, ಅವನ್ನು ಕೂಡಲೇ ಹಿಂಪಡೆಯಬೇಕು ಎಂದು ಹೇಳಿದರು.
ಸರ್ಕಾರವು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಕರೆದು ಮಾರ್ಚ್ 10ರೊಳಗೆ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮುಷ್ಕರದ ಮೊದಲ ಹಂತವಾಗಿ ಮಾರ್ಚ್ 11ರಿಂದ 15ರವರೆಗೆ ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಿ ತುರ್ತು ಸೇವೆಗಳನ್ನು ಮಾತ್ರ ನೀಡಲಾಗುವುದು. ಎರಡನೇ ಹಂತವಾಗಿ ಮಾರ್ಚ್ 16ರಿಂದ ಎಲ್ಲಾ ವೈದ್ಯರು ಹಾಗೂ ಅಧಿಕಾರಿ-ನೌಕರರು ಕರ್ತವ್ಯಕ್ಕೆ ಗೈರಾಗಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಡಾ. ವಿಜಯ್, ನಿರ್ವಾಣಿರಾವ್, ಡಾ. ಸಂತೋಷ್, ಜಗದೀಶ್, ವಿಷ್ಣುಪ್ರಕಾಶ್, ತೇಜಸ್ವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
