ಹಾಸನ: ನಗರದ ಪ್ರಮುಖ ರಸ್ತೆಯಾದ ಬೆಂಗಳೂರು ರಸ್ತೆಯಲ್ಲಿ ಇರುವ ‘ಕರಾವಳಿ ಲಾಡ್ಜ್’ ಮೇಲೆ ಮೈಸೂರಿನ ತನಿಖಾ ಸಂಸ್ಥೆಯ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ ಘಟನೆ ನಗರದಲ್ಲಿ ಸಂಚಲನ ಮೂಡಿಸಿದೆ.
ಖಚಿತ ಮಾಹಿತಿಯ ಆಧಾರದ ಮೇಲೆ ಮೈಸೂರಿನ ಪ್ರತಿಷ್ಠಿತ ತನಿಖಾ ಸಂಸ್ಥೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಲಾಡ್ಜ್ನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಯ ಕುರಿತು ಮಹತ್ವದ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ದಾಳಿ ನಡೆಯುವ ವೇಳೆಯಲ್ಲಿ ಸ್ಥಳದಲ್ಲಿದ್ದ ಕೆಲವರು ಪರಾರಿಯಾಗಿರುವುದಾಗಿ ತಿಳಿದುಬಂದಿದೆ.
ದಾಳಿಯ ವೇಳೆ ಲಾಡ್ಜ್ನ ಕೆಲ ಕೊಠಡಿಗಳಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳದಲ್ಲಿದ್ದವರ ಬಗ್ಗೆ ವಿಚಾರಣೆ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು. ದಂಧೆಗೆ ಸಂಬಂಧಿಸಿದಂತೆ ಕೆಲವು ಸಾಕ್ಷ್ಯಾಧಾರಗಳನ್ನು ಸಹ ಸಂಗ್ರಹಿಸಿರುವುದಾಗಿ ತಿಳಿದುಬಂದಿದೆ.
ಈ ಘಟನೆ ಕುರಿತು ತಕ್ಷಣವೇ ಸ್ಥಳೀಯ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಆದರೆ ದಾಳಿಯ ಮುನ್ಸೂಚನೆ ಸಿಕ್ಕಿದ್ದರಿಂದ ದಂಧೆಯಲ್ಲಿ ತೊಡಗಿದ್ದ ಕೆಲವರು ಸ್ಥಳದಿಂದ ಪರಾರಿಯಾಗಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರು ಸದ್ಯ ಪ್ರಕರಣ ದಾಖಲಿಸಿ ಪರಾರಿಯಾದವರ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಿದ್ದು, ಲಾಡ್ಜ್ ಮಾಲೀಕರು ಹಾಗೂ ನಿರ್ವಾಹಕರ ಪಾತ್ರದ ಕುರಿತು ಕೂಡ ತನಿಖೆ ನಡೆಸಲಾಗುತ್ತಿದೆ. ದಂಧೆಯನ್ನು ಸಂಘಟಿತವಾಗಿ ನಡೆಸಲಾಗುತ್ತಿದ್ದೆಯೇ ಎಂಬ ದಿಕ್ಕಿನಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಪ್ರಕರಣ ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ದಂಧೆಯಲ್ಲಿ ಕೆಲವು ಪ್ರಭಾವಿಗಳ ಸಂಪರ್ಕವಿರುವ ಸಾಧ್ಯತೆಗಳ ಬಗ್ಗೆ ಶಂಕೆಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಸ್ಥಳೀಯರು ಕೂಡ ನಗರದಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಇಂತಹ ದಂಧೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
