ಹಾಸನ: ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಸತ್ತಿಗರಹಳ್ಳಿ ಕೊಪ್ಪಲು ಗ್ರಾಮದಲ್ಲಿ ಶ್ರೀ ಮಾರಮ್ಮನವರ ಆರೋತ್ಸವ ಜಾತ್ರಾ ಮಹೋತ್ಸವವನ್ನು ಮಾರ್ಚ್ 13 ರಂದು ಭವ್ಯವಾಗಿ ಆಚರಿಸಲಾಗುತ್ತಿದೆ. ಈ ಜಾತ್ರೆಯ ಅಂಗವಾಗಿ ಶುಕ್ರವಾರ ರಾತ್ರಿ 8.30ಕ್ಕೆ ಶ್ರೀ ಮಾರಮ್ಮನವರ ಕೃಪಾಪೋಷಿತ ನಾಟಕ ಮಂಡಳಿಯವರಿಂದ “ತ್ರಿಜನ್ಮ ಮೋಕ್ಷ ಅಥವಾ ಜಯ ವಿಜಯರ ಶಾಪ ವಿಮೋಚನ” ಎಂಬ ಸುಂದರ ಪೌರಾಣಿಕ ನಾಟಕವನ್ನು ಪ್ರದರ್ಶಿಸಲಾಗುತ್ತಿದೆ ಎಂದು ದೇಗುಂದೇಗೌಡ ಅವರು ತಿಳಿಸಿದರು.
ಈ ನಾಟಕವನ್ನು ಆದಿಚುಂಚನಗಿರಿ ಕಾಲಭೈರವೇಶ್ವರ ಯುವಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಸತ್ತಿಗರಹಳ್ಳಿ ಕೊಪ್ಪಲು, ಸಂಗರವಳ್ಳಿ, ಕಾರ್ಲೆ, ಜೋಡಿಮಲ್ಲಪ್ಪನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಜಾತ್ರಾ ಮಹೋತ್ಸವವನ್ನು ಭವ್ಯವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಎಚ್.ಡಿ. ದೇವೇಗೌಡ, ಮಾಜಿ ಸಚಿವರು ಹಾಗೂ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ, ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸೇರಿದಂತೆ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಇದಲ್ಲದೆ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಎಂ. ಪಟೇಲ್, ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್, ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಜಾತ್ರಾ ಕಮಿಟಿ ವತಿಯಿಂದ ಅದೇ ದಿನ ಮಧ್ಯಾಹ್ನ 12 ಗಂಟೆಗೆ ಅನ್ನದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಜಾತ್ರಾ ಸಮಿತಿ ಸದಸ್ಯರು ಮನವಿ ಮಾಡಿದರು.
ಈ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ದೇಗುಂದೇಗೌಡ, ರಾಮಚಂದ್ರ, ಪುಟ್ಟರಾಜು ಸೇರಿದಂತೆ ಜಾತ್ರಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
