ರಾಮನಾಥಪುರ: ಇಲ್ಲಿನ ಮಕ್ಕಳ ಮನೆ ಶಾಲೆಗೆ ಶಾಸಕ ಎ. ಮಂಜು ಅವರ ಧರ್ಮಪತ್ನಿ ಶ್ರೀಮತಿ ತಾರಾ ಎ. ಮಂಜು ಭೇಟಿ ನೀಡಿ ಮಕ್ಕಳಿಗೆ LCD ರೈಟಿಂಗ್ ಪ್ಯಾಡ್ಗಳನ್ನು ವಿತರಿಸಿದರು. ಈ ವೇಳೆ ಅಂಗನವಾಡಿ ಕೇಂದ್ರದಲ್ಲಿ ಹಲವು ದಿನಗಳಿಂದ ವಿದ್ಯುತ್ ಇಲ್ಲದೆ ಮಕ್ಕಳು ತೊಂದರೆ ಅನುಭವಿಸುತ್ತಿರುವುದನ್ನು ಗಮನಿಸಿ, ಸ್ಥಳಕ್ಕೆ ಚೆಸ್ಕ್ ಅಧಿಕಾರಿಯನ್ನು ಕರೆಸಿ ತುರ್ತಾಗಿ ವಿದ್ಯುತ್ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ರಾಮನಾಥಪುರ ಗ್ರಾಮದಲ್ಲಿ ಮಕ್ಕಳ ಮನೆಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರು ಹಾಗೂ ಮಧ್ಯಮ ವರ್ಗದವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳ ಅಮಿಷಗಳಿಗೆ ಒಳಗಾಗದೆ ಸರ್ಕಾರಿ ಶಾಲೆಗಳಲ್ಲಿ ದಾಖಲಿಸಿ ಉತ್ತಮ ಶಿಕ್ಷಣ ಪಡೆಯಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ತಾಲೂಕಿನಲ್ಲಿ ಕಳೆದ ವರ್ಷ 13 ಮಕ್ಕಳ ಮನೆಗಳನ್ನು ಪ್ರಾರಂಭ ಮಾಡಲಾಗಿದ್ದು, ಈ ವರ್ಷ ಇನ್ನೂ ನಾಲ್ಕು ಹೆಚ್ಚುವರಿ ಮಕ್ಕಳ ಮನೆಗಳನ್ನು ಆರಂಭಿಸಲಾಗುತ್ತಿದೆ. ಗ್ರಾಮೀಣ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಈ ಯೋಜನೆ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮಕ್ಕಳು ಪ್ರಾರಂಭದಿಂದಲೇ ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಗ್ರಾಮ ಮುಖಂಡರು ಉಪಸ್ಥಿತರಿದ್ದರು.
ವರದಿ – ಕುಮಾರಸ್ವಾಮಿ
