ಸಕಲೇಶಪುರ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶುಕ್ರವಾರ ಅಪರಾಹ್ನ ಸಕಲೇಶಪುರ ತಾಲ್ಲೂಕಿನ ಗುಂಡ್ಯ ಗಡಿ ದೇವಸ್ಥಾನದ ಸಮೀಪ ಈ ದಾರುಣ ಘಟನೆ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮತ್ತು ಮಂಗಳೂರಿನಿಂದ ಹೊರಟಿದ್ದ ಕೆಎಸ್ಆರ್ಟಿಸಿ ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ, ಉಜಿರೆ ನಿವಾಸಿ ಶ್ರೀಧರ್ ಮರಕಡ ಹಾಗೂ ಉಜಿರೆ ನಿವಾಸಿ ಜನಾರ್ದನ ಕೆರಿಮಾರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸುರೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೃತರು ಸಕಲೇಶಪುರಕ್ಕೆ ಮದುವೆ ಕಾರ್ಯಕ್ರಮಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ. ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆ, ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
