ರಾಮನಾಥಪುರ: ರಾಮನಾಥಪುರ ಸಮೀಪದ ದೊಡ್ಡಮಗ್ಗೆ ಹೋಬಳಿಯ ಮುದ್ದನಹಳ್ಳಿ ಗ್ರಾಮದ ಶ್ರೀ ವೀರಾಂಜನೇಯ ನೂತನ ದೇವಾಲಯದ ಕಳಸ ಪ್ರತಿಷ್ಠಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಎ. ಮಂಜು ಅವರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು.

ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಎ. ಮಂಜು, ಗ್ರಾಮೀಣ ಪ್ರದೇಶಗಳಲ್ಲಿ ದೇವಸ್ಥಾನಗಳ ಅಭಿವೃದ್ಧಿಯ ಜೊತೆಗೆ ಶಾಲೆ-ಕಾಲೇಜುಗಳನ್ನೂ ಅಭಿವೃದ್ಧಿಪಡಿಸಿ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವುದು ಅತ್ಯಂತ ಅಗತ್ಯ ಎಂದು ಮನವಿ ಮಾಡಿದರು.
ಗ್ರಾಮದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುದ್ದನಹಳ್ಳಿ ಗ್ರಾಮದ ಮುಖ್ಯರಸ್ತೆ ಅಭಿವೃದ್ಧಿಗೆ 35 ಲಕ್ಷ ರೂ. ಅನುದಾನವನ್ನು ನೀಡಲಾಗಿದೆ ಎಂದು ತಿಳಿಸಿದರು. ಈ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಿ ಬೇಗನೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ಇಂದಿನ ಒತ್ತಡದ ಬದುಕಿನಲ್ಲಿ ದೇವರು ಮತ್ತು ಧರ್ಮದ ಹಾದಿಯಲ್ಲಿ ಸಾಗಿದರೆ ಮಾತ್ರ ಕೈಗೊಂಡ ಕೆಲಸಗಳು ಯಶಸ್ವಿಯಾಗುವುದಲ್ಲದೆ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ದೊರೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ- ಕುಮಾರಸ್ವಾಮಿ.
