ಹಾಸನ, ಮಾ.21: ಯುಗಾದಿ ಹಬ್ಬದ ಹಿನ್ನೆಲೆ ನಿರ್ಜನ ಪ್ರದೇಶದಲ್ಲಿ ಜೂಜಾಟದಲ್ಲಿ ತೊಡಗಿದ್ದ ಯುವಕರ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ, ಸ್ಥಳದಿಂದ ತಪ್ಪಿಸಿಕೊಳ್ಳಲು ಓಡಿದ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಅರೆಕೆರೆ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಪ್ರವೀಣ್ (34) ಎಂದು ಗುರುತಿಸಲಾಗಿದೆ. ಅರೆಕೆರೆ ಗ್ರಾಮದ ಪಕ್ಕದಲ್ಲಿರುವ ತಾವರೆಹಳ್ಳಿ ಸಮೀಪದ ನಿರ್ಜನ ಪ್ರದೇಶದಲ್ಲಿ ಕೆಲ ಯುವಕರು ಇಸ್ಪೀಟ್ ಆಟದಲ್ಲಿ ತೊಡಗಿದ್ದರು ಎನ್ನಲಾಗಿದೆ. ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಜಾವಗಲ್ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.
ಪೊಲೀಸರ ದಾಳಿ ವೇಳೆ ಅಲ್ಲಿದ್ದ ಯುವಕರು ಸ್ಥಳದಿಂದ ತಪ್ಪಿಸಿಕೊಳ್ಳಲು ಓಡಿದ್ದು, ಈ ವೇಳೆ ಪ್ರವೀಣ್ ಅವರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಮೃತ ಪ್ರವೀಣ್ ಅವರು ಮೂರ್ಚೆ (ಎಪಿಲೆಪ್ಸಿ) ರೋಗದಿಂದ ಬಳಲುತ್ತಿದ್ದರು ಎಂಬ ಶಂಕೆಯೂ ವ್ಯಕ್ತವಾಗಿದ್ದು, ಓಡುವ ಸಂದರ್ಭದಲ್ಲಿ ಅಸ್ವಸ್ಥಗೊಂಡು ಬಿದ್ದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.
ಆದರೆ, ಮೃತದೇಹದ ಮೇಲೆ ರಕ್ತದ ಕಲೆಗಳು ಕಂಡುಬಂದ ಹಿನ್ನೆಲೆ, ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಸಾವಿನ ನಿಖರ ಕಾರಣ ತಿಳಿದುಕೊಳ್ಳಲು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಹಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದ್ದು, ವರದಿ ಬಂದ ನಂತರವೇ ಸಾವಿನ ನಿಖರ ಕಾರಣ ಸ್ಪಷ್ಟವಾಗಲಿದೆ.
ಈ ಸಂಬಂಧ ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
