ಹಾಸನ, ಮಾ.21: ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಅನಾವಶ್ಯಕ ಕಿರುಕುಳ ನೀಡುತ್ತಿದ್ದಾರೆ ಎಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಆರೋಪಿಸಿದರು.
ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಮೇಲೂ ಅನಗತ್ಯ ಒತ್ತಡ ಮತ್ತು ತೊಂದರೆ ನೀಡಲಾಗುತ್ತಿದೆ ಎಂದು ದೂರಿದರು.
ಹಿರಿಯ ಶಾಸಕರಾಗಿರುವ ಎಚ್.ಡಿ. ರೇವಣ್ಣ ಅವರು, ಜನಪ್ರತಿನಿಧಿಗಳಿಗೆ ಮಾರ್ಗದರ್ಶನ ನೀಡಬೇಕಾದ ಸಂದರ್ಭದಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು ನಡೆದುಕೊಳ್ಳುತ್ತಿರುವುದು ಸಮಂಜಸವಲ್ಲ ಎಂದು ಟೀಕಿಸಿದರು.
ಕ್ಷೇತ್ರದ ಅಭಿವೃದ್ಧಿ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪಿಸುವ ಬದಲು, ಅಧಿಕಾರಿಗಳ ವಿರುದ್ಧವೇ ನಿರಂತರವಾಗಿ ಮಾತನಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ ಅವರು, ಸರ್ಕಾರಕ್ಕೆ ಸಲಹೆ ನೀಡಿ ಒಟ್ಟಾಗಿ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಬೇಕಾದರೆ, ನಿರಾಧಾರ ಆರೋಪಗಳ ಮೂಲಕ ಅಧಿಕಾರಿಗಳನ್ನು ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ಷೇಪಿಸಿದರು.
ಹೊಳೆನರಸೀಪುರ ಜಾತ್ರೆಯಲ್ಲಿ ನಡೆದ ಗಲಾಟೆ ಕುರಿತು ಪ್ರತಿಕ್ರಿಯಿಸಿದ ಶ್ರೇಯಸ್ ಪಟೇಲ್, ಆ ಘಟನೆಗೆ ಸಂಬಂಧಿಸಿದ ಸತ್ಯಸ್ಥಿತಿ ಜಿಲ್ಲೆಯ ಜನರಿಗೆ ತಿಳಿದಿದೆ ಎಂದು ಹೇಳಿದರು. ಕೆಲಸ ಮಾಡುವ ಅಧಿಕಾರಿಗಳಿಗೆ ಸಹಕಾರ ನೀಡುವ ಬದಲು ತೊಂದರೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಜನರ ಸಮಸ್ಯೆಗಳ ಪರಿಹಾರದಲ್ಲಿ ಗಮನ ಹರಿಸುವುದನ್ನು ಬಿಟ್ಟು, ಅಧಿಕಾರಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರನ್ನು ಗುರಿಯಾಗಿಸಿ ಟೀಕೆ ಮಾಡುವುದರಲ್ಲೇ ಸಮಯ ವ್ಯರ್ಥ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಜನರು ಈ ಬೆಳವಣಿಗೆಯನ್ನು ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಮಹಿಳೆಯಾಗಿದ್ದರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಿರುವುದು ಖಂಡನೀಯ ಎಂದು ಹೇಳಿದ ಅವರು, ಇದು ಶಾಸಕರು ತಮ್ಮ ಜವಾಬ್ದಾರಿಯಲ್ಲಿ ವಿಫಲರಾಗಿರುವುದನ್ನು ಸೂಚಿಸುತ್ತದೆ ಎಂದು ಟೀಕಿಸಿದರು.
ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟ್ಗಳಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಆರೋಪವನ್ನು ತಳ್ಳಿ ಹಾಕಿದ ಶ್ರೇಯಸ್ ಪಟೇಲ್, ಯಾವುದೇ ಅಧಿಕಾರಿ ಒಂದು ಪಕ್ಷದ ಪರವಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಸರ್ಕಾರಗಳು ಬದಲಾಗುತ್ತಲೇ ಇರುತ್ತವೆ, ಆದರೆ ಅಧಿಕಾರಿಗಳು ಎಲ್ಲ ಸರ್ಕಾರಗಳಲ್ಲೂ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಪೆನ್ಡ್ರೈವ್ ಹಂಚಿಕೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಎಸ್ಐಟಿ ತನಿಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಯಾರಿಗಾದರೂ ಅನ್ಯಾಯವಾಗಿದೆ ಎಂಬ ಭಾವನೆ ಇದ್ದರೆ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. ಪ್ರಕರಣದ ಸಂಪೂರ್ಣ ವಿವರಗಳು ತಮ್ಮ ಬಳಿ ಇಲ್ಲ ಎಂದು ಹೇಳಿದರು.
ಇದೇ ವೇಳೆ ಜಿಲ್ಲೆಯಲ್ಲಿ ಗ್ಯಾಸ್ ಲಭ್ಯತೆ ಕುರಿತು ಮಾಹಿತಿ ನೀಡಿದ ಅವರು, ಸುಮಾರು 3,200 ಕಮರ್ಷಿಯಲ್ ಗ್ಯಾಸ್ ಕೊರತೆ ಇದ್ದರೂ, 7,731 ಗೃಹಬಳಕೆ ಸಿಲಿಂಡರ್ಗಳು ಸ್ಟಾಕ್ನಲ್ಲಿ ಲಭ್ಯವಿವೆ ಎಂದು ತಿಳಿಸಿದರು. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಮನವಿ ಮಾಡಿದರು.
