ಕೊರಟಗೆರೆ, ಏ.02 : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಗ್ರಾಮದಲ್ಲಿ ಸಾಲಬಾಧೆಯಿಂದ ನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ರವಿಕುಮಾರ್ (29) ಎಂದು ಗುರುತಿಸಲಾಗಿದೆ.
ರವಿಕುಮಾರ್ ವೃತ್ತಿಯಲ್ಲಿ ಕ್ಷೌರಿಕನಾಗಿದ್ದು, ಗ್ರಾಮದಲ್ಲೇ ಸಣ್ಣ ಮಟ್ಟದಲ್ಲಿ ಅಂಗಡಿ ನಡೆಸುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಅವರು ವಿವಿಧ ಮೂಲಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಅಂಗಡಿಯ ಆದಾಯ ಕಡಿಮೆಯಾಗಿದ್ದು, ಸಾಲದ ಒತ್ತಡ ಹೆಚ್ಚಾದ ಪರಿಣಾಮ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಘಟನೆಯ ದಿನ ರವಿಕುಮಾರ್ ತಮ್ಮ ಮನೆಯಲ್ಲಿ ನೇಣಿಗೆ ಶರಣಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ನೋವಿನಲ್ಲಿ ಮುಳುಗಿದರು.
ಈ ಘಟನೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣ ಮಾಡಿದೆ.
ಮೃತ ರವಿಕುಮಾರ್ ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿದು ಕೊರಟಗೆರೆ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇನ್ನೊಂದೆಡೆ, ಗ್ರಾಮಸ್ಥರು ಮೃತರ ಕುಟುಂಬಕ್ಕೆ ಸರ್ಕಾರದಿಂದ ತಕ್ಷಣ ಪರಿಹಾರ ನೀಡಬೇಕು.
ಜೊತೆಗೆ ಸಾಲದ ಒತ್ತಡದಿಂದ ಬಳಲುತ್ತಿರುವ ಸಣ್ಣ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ವಿಶೇಷ ನೆರವು ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.
ವರದಿ : ನರಸಿಂಹಯ್ಯ ಹೊಸಕೋಟೆ
