ಉಚ್ಚಂಗಿ: ಶ್ರೀರಾಮ ಸೇವಾ ಸಮಿತಿ ಉಚ್ಚಂಗಿ ವತಿಯಿಂದ ಶ್ರೀ ಪ್ರಸನ್ನ ರಾಮೇಶ್ವರ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಮನವಮಿ ಶತಮಾನೋತ್ಸವ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮವು ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತಿ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಿದ್ದು, ಈ ಸಂದರ್ಭದಲ್ಲಿ ಹಲವಾರು ಭಕ್ತರು ಹಾಗೂ ಗಣ್ಯರು ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗಣ್ಯರು, ಶ್ರೀ ರಾಮನವಮಿ ಆಚರಣೆಗಳು ಕೇವಲ ಧಾರ್ಮಿಕ ಕಾರ್ಯಕ್ರಮಗಳಷ್ಟೇ ಅಲ್ಲದೆ ಸಮಾಜದಲ್ಲಿ ಸನಾತನ ಮೌಲ್ಯಗಳು, ಭಕ್ತಿ, ಶಾಂತಿ ಮತ್ತು ಧರ್ಮಾಚರಣೆಯನ್ನು ಬಲಪಡಿಸುವ ಮಹತ್ವದ ವೇದಿಕೆಗಳಾಗಿವೆ ಎಂದು ಹೇಳಿದರು.
ಈ ವೇಳೆ ಜಗದ್ಗುರುಗಳ ದರ್ಶನಾಶೀರ್ವಾದ ಪಡೆಯುವ ಭಾಗ್ಯ ದೊರೆತಿದ್ದು, ಭಕ್ತರು ಭಕ್ತಿಭಾವದಿಂದ ಆಶೀರ್ವಾದ ಪಡೆದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕಂಪಲ, ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
