ಉಜಿರೆ, ಏ.6: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ (ರಿ) ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಆಯೋಜಿಸಲಾದ ಎರಡು ದಿನಗಳ ರಾಜ್ಯ ಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳಕ್ಕೆ ಇಂದು ಚಾಲನೆ ನೀಡಲಾಯಿತು.
ಉದ್ಯೋಗ ಮೇಳವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಉದ್ಘಾಟಿಸಿ ಮಾತನಾಡಿ, ಇಂದಿನ ಶೈಕ್ಷಣಿಕ ಕ್ಷೇತ್ರದ ದೊಡ್ಡ ಸವಾಲುಗಳಲ್ಲಿ ಉದ್ಯೋಗಾವಕಾಶಗಳ ಕೊರತೆ ಪ್ರಮುಖವಾಗಿದೆ. ಅನೇಕ ಉದ್ಯೋಗಾಕಾಂಕ್ಷಿಗಳು ಸಮರ್ಥರಾಗಿದ್ದರೂ, ಸೂಕ್ತ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಉಜಿರೆಯಂತಹ ಗ್ರಾಮೀಣ ಪ್ರದೇಶದಲ್ಲಿ ದೇಶದ 100ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುವ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಉದ್ಯೋಗ ಮೇಳವು ಎಸ್.ಡಿ.ಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ಎಲ್ಲಾ ಕ್ಷೇತ್ರಗಳ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಮುಕ್ತ ಮತ್ತು ಉಚಿತವಾಗಿ ಭಾಗವಹಿಸಲು ಅವಕಾಶ ಕಲ್ಪಿಸಿದೆ. ಇದರಿಂದ ಗ್ರಾಮೀಣ ಭಾಗದ ಯುವಜನತೆಗೆ ಹೊಸ ಅವಕಾಶಗಳು ಹಾಗೂ ವೃತ್ತಿಜೀವನದ ದಿಕ್ಕು ದೊರೆಯಲಿದೆ ಎಂದು ತಿಳಿಸಿದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶದ ಸೇತುವೆ
ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾವುದೇ ರೀತಿಯ ಅವಕಾಶ ಮತ್ತು ಸವಲತ್ತುಗಳಿಂದ ವಂಚಿತರಾಗಬಾರದು ಎಂಬ ಸದಾಶಯದಿಂದ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇದು ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ಹೊಸ ಅನುಭವ ಮತ್ತು ಉತ್ತಮ ಉದ್ಯೋಗಾವಕಾಶಗಳ ವೇದಿಕೆಯಾಗಲಿದೆ ಎಂದು ಡಾ. ಸತೀಶ್ಚಂದ್ರ ಎಸ್ ಅಭಿಪ್ರಾಯಪಟ್ಟರು.
ಕೌಶಲ್ಯಾಭಿವೃದ್ಧಿಗೆ ಒತ್ತು
ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಗ್ರಿಲೀಫ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅವಿನಾಶ್ ರಾವೋ ಮಾತನಾಡಿ, ಆಧುನಿಕ ಯುಗದಲ್ಲಿ ಬಹುತೇಕ ಎಲ್ಲಾ ಕ್ಷೇತ್ರಗಳು ವೇಗವಾಗಿ ಬದಲಾಗುತ್ತಿವೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಸೇರಿದಂತೆ ತಂತ್ರಜ್ಞಾನವು ಉದ್ಯೋಗ ಮಾರುಕಟ್ಟೆಯ ಸ್ವರೂಪವನ್ನೇ ಬದಲಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಯುವಕರು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ವೃದ್ಧಿಸಿಕೊಂಡು ಸುಸ್ಥಿರ ಸಾಧನೆಯತ್ತ ಸಾಗಬೇಕು ಎಂದು ಕರೆ ನೀಡಿದರು.
ಉದ್ಯೋಗಾಕಾಂಕ್ಷಿಗಳಿಗೆ ತಮ್ಮ ಕ್ಷೇತ್ರದಲ್ಲಾಗುತ್ತಿರುವ ಬದಲಾವಣೆಗಳ ಅರಿವು ಹಾಗೂ ಸಮಗ್ರ ಜ್ಞಾನ ಅಗತ್ಯವಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸಂಸ್ಥೆಗಳಿಗೆ, ಅವರಿಗೆ ಉದ್ಯೋಗಾವಕಾಶ ಒದಗಿಸಿ ಬದುಕು ಕಟ್ಟಿಕೊಳ್ಳಲು ನೆರವಾಗುವ ಜವಾಬ್ದಾರಿಯೂ ಇದೆ. ಈ ನಿಟ್ಟಿನಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ ಮಹತ್ವದ ಕಾರ್ಯ ನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿದ್ದ ಅವಿನಾಶ್ ರಾವೋ ಅವರನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಸ್ವಾಯತ್ತ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ, ಎಸ್.ಡಿ.ಎಂ ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ, ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸಂತೋಷ್, ಉದ್ಯೋಗ ಮೇಳದ ಆಯೋಜಕ ಸಮಿತಿಯ ಕಾರ್ಯದರ್ಶಿಗಳಾದ ಡಾ. ನಾಗರಾಜ್ ಪೂಜಾರಿ, ಡಾ. ಸುಬ್ರಹ್ಮಣ್ಯ ಹಾಗೂ ಅಮರೇಶ್ ಹೆಬ್ಬಾರ್ ಉಪಸ್ಥಿತರಿದ್ದರು.
ಉದ್ಘಾಟನಾ ಸಮಾರಂಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿವಿಧ ಕಾಲೇಜುಗಳ ಮುಖ್ಯಸ್ಥರು, ಆಡಳಿತ ಕುಲಸಚಿವರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಸೇರಿದಂತೆ ನೂರಾರು ಸಂಖ್ಯೆಯ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವೈದೇಹಿ ಮತ್ತು ತಂಡದವರು ಪ್ರಾರ್ಥನೆ ಹಾಡಿದರು. ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಮಹೇಶ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
