ರಾಮನಾಥಪುರ, ಏ.16 (ಆರ್ಎನ್ಪಿ): ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ಚತುರ್ಯಗ ಮೂರ್ತಿ ಶ್ರೀ ರಾಮೇಶ್ವರಸ್ವಾಮಿ ದೇವಾಲಯದ ವಾರ್ಷಿಕ ರಥೋತ್ಸವವು ಏಪ್ರಿಲ್ 20ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಗುರುವಾರ ದೇವಾಲಯದ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಮಾಜಿ ಸಚಿವರು ಹಾಗೂ ಶಾಸಕ ಭಾಗವಹಿಸಿ ಮಾತನಾಡಿ, ರಥೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರು, ಪ್ರಸಾದ ವ್ಯವಸ್ಥೆ, ದೇವಾಲಯದ ಹೂವಿನ ಅಲಂಕಾರ, ವಿದ್ಯುತ್ ದೀಪಾಲಂಕಾರ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ಅವರು ತಿಳಿಸಿದರು. ಗ್ರಾಮೀಣ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದರು.
ಈಗಾಗಲೇ ಬಿಸಿಲಿನ ತೀವ್ರತೆ ಹೆಚ್ಚಿರುವುದರಿಂದ ರಥೋತ್ಸವದ ದಿನ ರಥ ಬೀದಿಗೆ ನೀರಿನ ಟ್ಯಾಂಕರ್ ಮೂಲಕ ರಸ್ತೆ ತಂಪಾಗಿಸುವ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರಿಗೆ ಸೂಚಿಸಿದರು. ತಾನು ಸಹ ರಥೋತ್ಸವದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ದೇವಾಲಯದ ಅರ್ಚಕರು ಶ್ರೀನಿವಾಸ್, ನಾಡಕಚೇರಿ ಉಪತಹಸೀಲ್ದಾರ್ ರಜಿನಿಕಾಂತ್, ಗುತ್ತಿಗೆದಾರ ನಾರಾಯಣಸ್ವಾಮಿ, ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ, ಕಾರ್ಯದರ್ಶಿ ರೇವಣ್ಣ, ಕಾವೇರಿ ನದಿ ಸ್ವಚ್ಚತಾ ಆಂದೋಲನ ಸಮಿತಿ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಖಜಾಂಚಿ ರಘು, ಕಾರ್ಯದರ್ಶಿ ಕಾಳಬೋಯಿ, ತಾಲೂಕು ಅಧ್ಯಕ್ಷ ಸಿದ್ದರಾಜು, ಖಜಾಂಚಿ ಕೇಶವ ಸೇರಿದಂತೆ ಹಲವರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
