ಹಾಸನ: ಆಚಾರ್ಯ ವಾಣಿಜ್ಯ ಪಿಯು ಹಾಗೂ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಏಪ್ರಿಲ್ 23ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಆಚಾರ್ಯ ಶಿಕ್ಷಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಅಂತರರಾಷ್ಟ್ರೀಯ ಜಾವಲಿನ್ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಪ್ರೀತಂ ಆರ್. ಅವರಿಗೆ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಆದರ್ಶ ತಿಳಿಸಿದ್ದಾರೆ.
ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಶ್ರೇಷ್ಠ ಹಾಗೂ ಕ್ರಿಯಾಶೀಲ ಶಿಕ್ಷಕರನ್ನು ಗುರುತಿಸಿ ಗೌರವಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದರು. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜು ಶೇ.100 ಫಲಿತಾಂಶ ಪಡೆದಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದಾಗಿ ಹೇಳಿದರು. ಎಸ್ಎಸ್ಎಲ್ಸಿ ಅಂಕಗಳು ಕಡಿಮೆ ಇದ್ದರೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು, ದ್ವಿತೀಯ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಪಡೆಯುವಂತೆ ತರಬೇತಿ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮಕ್ಕೆ ತುಮಕೂರಿನ ಹಿರೇಮಠ ತಪೋವನದ ಪೀಠಾಧ್ಯಕ್ಷರಾದ Dr. Shivananda Shivacharya Swamiji ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಉದ್ಘಾಟನೆಯನ್ನು ಉಪ ಆಯುಕ್ತರು ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳಾದ Dr. V. Manjunath ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಕೆ.ಆರ್. ಹರೀಶ್ ವಹಿಸಲಿದ್ದು, ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಆಚಾರ್ಯ ಶಿಕ್ಷಕ ರತ್ನ ಪ್ರಶಸ್ತಿಯನ್ನು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರದಾನ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಾಸನ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಬಾ.ನಂ. ಲೋಕೇಶ್, ಜಿಲ್ಲಾ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್ ಹೆಚ್.ಎಸ್ ಹಾಗೂ ಮಾನವ ಹಕ್ಕುಗಳ ಮಹಾಮೈತ್ರಿ ಅಧ್ಯಕ್ಷ ಹೆಚ್.ಎಸ್. ವಿಶ್ವನಾಥ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
