ಕೊರಟಗೆರೆ:- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಬಫರ್ ಡ್ಯಾಮ್ ನಿರ್ಮಾಣವಾದರೆ ವಡೇರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ನಾಲ್ಕು ಗ್ರಾಮಗಳು ಸಂಪೂರ್ಣ ಅಥವಾ ಭಾಗಶಃ ಮುಳುಗಡೆಯಾಗಲಿದ್ದು, ನೂರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.
ಕೈಯಲ್ಲಿ ಫಲಕಗಳನ್ನು ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅಭಿವೃದ್ಧಿ ಹೆಸರಿನಲ್ಲಿ ರೈತರ ಬದುಕನ್ನೇ ಹಾಳು ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಹಲವು ಪೀಳಿಗೆಯಿಂದ ಕೃಷಿಯನ್ನೇ ನಂಬಿಕೊಂಡು ಬದುಕು ಕಟ್ಟಿಕೊಂಡಿರುವ ಜನರನ್ನು ಏಕಾಏಕಿ ಸ್ಥಳಾಂತರಿಸುವುದು ಮಾನವೀಯವಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದರು.
ಬಫರ್ ಡ್ಯಾಮ್ ನಿರ್ಮಾಣವಾದರೆ ವಡೇರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಕೃಷಿ ಭೂಮಿ, ಮನೆಗಳು ಹಾಗೂ ದೇವಾಲಯಗಳು ನೀರಿನಲ್ಲಿ ಮುಳುಗಡೆಯಾಗಲಿವೆ. ಇದರಿಂದ ರೈತರು ಮಾತ್ರವಲ್ಲದೆ ಕೂಲಿ ಕಾರ್ಮಿಕರು, ಸಣ್ಣ ವ್ಯಾಪಾರಸ್ಥರು ಹಾಗೂ ಗ್ರಾಮೀಣ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಲಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.
“ರಾಜ್ಯಕ್ಕೆ ನೀರು ಕೊಡಬೇಕು ಎನ್ನುವುದು ಒಳ್ಳೆಯ ಉದ್ದೇಶ. ಆದರೆ ಅದರ ಹೆಸರಿನಲ್ಲಿ ನಮ್ಮ ಗ್ರಾಮಗಳನ್ನೇ ಅಳಿಸಿಬಿಡಲು ಸಾಧ್ಯವಿಲ್ಲ. ನೂರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿರುವ ಜನರನ್ನು ನಿರಾಶ್ರಿತರನ್ನಾಗಿ ಮಾಡುವುದು ಯಾವ ನ್ಯಾಯ?” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸುವ ಮುನ್ನ ಗ್ರಾಮಸ್ಥರ ಅಭಿಪ್ರಾಯ ಪಡೆಯದೇ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು, ಯೋಜನೆ ಕುರಿತ ಸಂಪೂರ್ಣ ಮಾಹಿತಿ ಸಾರ್ವಜನಿಕರಿಗೆ ನೀಡಬೇಕು ಎಂದು ಆಗ್ರಹಿಸಿದರು. ಪರ್ಯಾಯ ವ್ಯವಸ್ಥೆ, ಸಮರ್ಪಕ ಪರಿಹಾರ ಹಾಗೂ ಪುನರ್ವಸತಿ ಕುರಿತು ಸ್ಪಷ್ಟ ಭರವಸೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ನೀಡಿದರು.
ಪ್ರತಿಭಟನೆ ವೇಳೆ ಗ್ರಾಮಸ್ಥರು ತಹಶೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿ, ಮುಳುಗಡೆಯಾಗುವ ಗ್ರಾಮಗಳನ್ನು ಉಳಿಸುವಂತೆ ಹಾಗೂ ಬಫರ್ ಡ್ಯಾಮ್ ಕಾಮಗಾರಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು.
– ಶ್ರೀನಿವಾಸ್ ಕೊರಟಗೆರೆ.
