ಚನ್ನರಾಯಪಟ್ಟಣ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರ 94ನೇ ಜನ್ಮದಿನದ ಅಂಗವಾಗಿ ತಾಲ್ಲೂಕಿನಲ್ಲಿ ಭಕ್ತಿ, ಸೇವೆ ಹಾಗೂ ಸಂಭ್ರಮದ ಕಾರ್ಯಕ್ರಮಗಳು ನಡೆದವು.
ಶಾಸಕ ಸಿ.ಎನ್. ಬಾಲಕೃಷ್ಣ ಹಾಗೂ ಜೆಡಿಎಸ್ ಕಾರ್ಯಕರ್ತರು 40 ಅಡಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವೇಗೌಡರ ಆರೋಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಸಾರ್ವಜನಿಕರಿಗೆ ಸಿಹಿ ಹಂಚಿಕೆ ಮಾಡಲಾಯಿತು.
ಸೇವಾ ಕಾರ್ಯದ ಭಾಗವಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ ಎಲ್ಇಡಿ ಟಿವಿ ಕೊಡುಗೆಯಾಗಿ ನೀಡಲಾಗಿದ್ದು, ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಎನ್. ಬಾಲಕೃಷ್ಣ ಅವರು, ದೇವೇಗೌಡರು ರೈತರ ಪರ ಹೋರಾಟದ ಮೂಲಕ ರಾಜಕೀಯ ಇತಿಹಾಸದಲ್ಲಿ ವಿಶಿಷ್ಟ ಸ್ಥಾನ ಪಡೆದ ನಾಯಕರು. ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ನೀರಾವರಿ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರು, ವಿವಿಧ ಸಂಘಟನೆಗಳ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
– ಮಂಜುನಾಥ್ ಐ.ಕೆ.
