ಕೊರಟಗೆರೆ: ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯ ಅನುಷ್ಠಾನ ಹಾಗೂ ರೈತರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲು ಕೇಂದ್ರ ತಂಡವು ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ಪಾತಗಾನಹಳ್ಳಿ ಮತ್ತು ಚಿನ್ನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿತು.

ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯ ನೋಡೆಲ್ ಅಧಿಕಾರಿಗಳು ಹಾಗೂ ಕೇಂದ್ರ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಗಳಾದ ಡಾ. ಏಕ್ರೂಪ್ ಕೌರ್ ಭಾ.ಆ.ಸೇ. ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ವಿ. ಅಶ್ವಿಜಾ ಅವರು ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಮೂಲಕ ರೈತರಿಗೆ ನೀಡಲಾಗಿರುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ರೈತರ ಜಮೀನುಗಳಿಗೆ ಕ್ಷೇತ್ರ ಭೇಟಿ ನೀಡಿ ನೇರವಾಗಿ ರೈತರೊಂದಿಗೆ ಸಂವಾದ ನಡೆಸಿದರು.

ಭೇಟಿಯ ವೇಳೆ ಆಧುನಿಕ ಕೃಷಿ ತಂತ್ರಜ್ಞಾನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಡ್ರೋನ್ ತಂತ್ರಜ್ಞಾನದ ಮೂಲಕ ನ್ಯಾನೋ ಯೂರಿಯಾ ಸಿಂಪಡಣೆ ಮಾಡುವ ಪ್ರಾತ್ಯಕ್ಷಿಕೆಯನ್ನು ಅಧಿಕಾರಿಗಳು ವೀಕ್ಷಿಸಿದರು. ಈ ತಂತ್ರಜ್ಞಾನದಿಂದ ಕಡಿಮೆ ಸಮಯದಲ್ಲಿ ಪರಿಣಾಮಕಾರಿ ರೀತಿಯಲ್ಲಿ ರಸಗೊಬ್ಬರ ಸಿಂಪಡಣೆ ಸಾಧ್ಯವಾಗುವುದರ ಜೊತೆಗೆ ವೆಚ್ಚವೂ ಕಡಿಮೆಯಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ರೈತರಿಗೆ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದು ಉತ್ಪಾದಕತೆ ಹೆಚ್ಚಿಸಿಕೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಲಕ್ಷ್ಮಣ ಎಸ್. ಕಳ್ಳೇನವರ, ಉಪ ಕೃಷಿ ನಿರ್ದೇಶಕರಾದ ಹುಲಿರಾಜ್, ಡಾ. ಚಂದ್ರಕುಮಾರ್, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಾದ ಶಾರದಮ್ಮ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಲೋಗಾನಂದ್, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ರಾಮಾಂಜಲಪ್ಪ, ಸಹಾಯಕ ಕೃಷಿ ನಿರ್ದೇಶಕರಾದ ರುದ್ರಪ್ಪ ಎಂ.ಆರ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
– ಶ್ರೀನಿವಾಸ್ ಕೊರಟಗೆರೆ.
