ಕೆ.ಆರ್.ಪೇಟೆ: ಪಟ್ಟಣದ ಹೊರವಲಯದ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಶಾಸಕ ಹೆಚ್.ಟಿ. ಮಂಜು ಅವರ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶಾಸಕ ಹೆಚ್.ಟಿ. ಮಂಜು, ಎಪಿಎಂಸಿ ಜಾಗವನ್ನು ಕಬಳಿಸಲು ಕೆಲವರು ಪ್ರಯತ್ನಿಸುತ್ತಿದ್ದು, ಅಧಿಕಾರಿಗಳು ಸರ್ಕಾರಿ ಜಮೀನಿನ ರಕ್ಷಣೆಗೆ ಮುಂದಾಗಬೇಕು ಎಂದು ಸೂಚಿಸಿದರು. ಸಿಂಧುಘಟ್ಟ ಗ್ರಾಮದಲ್ಲಿ ವಸತಿ ಯೋಜನೆಗಾಗಿ ಸರ್ಕಾರಿ ಜಾಗ ಗುರುತಿಸುವಂತೆ ಹಾಗೂ ಹಳೆ ಮುದ್ಲಾಪುರದಲ್ಲಿ ರಸ್ತೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶೀಳನೆರೆ ಹೋಬಳಿಯ ಮಾದಿಗರಹೊಸಹಳ್ಳಿ ಕೆರೆಯನ್ನು ಸಂರಕ್ಷಿಸಲು ಪಹಣಿಯಲ್ಲಿ ಕೆರೆಯಾಗಿ ದಾಖಲಿಸಿ ಸರ್ವೆ ಕಾರ್ಯ ನಡೆಸಬೇಕು ಎಂದು ಜಿಲ್ಲಾಡಳಿತಕ್ಕೆ ಸಲಹೆ ನೀಡಿದರು. ಸಾಸಲು ಗ್ರಾಮದ ಶ್ರೀ ಶಂಭುಲಿಂಗೇಶ್ವರ ಹಾಗೂ ಶ್ರೀ ಸೋಮೇಶ್ವರ ದೇವಾಲಯದ ಜಮೀನುಗಳ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ಡಾ. ಕುಮಾರ್ ಮಾತನಾಡಿ, ಹಿಂದಿನ ಜನಸಂಪರ್ಕ ಸಭೆಗಳಲ್ಲಿ ಸ್ವೀಕೃತವಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಸಮರ್ಪಕ ಸ್ಪಂದನೆ ನೀಡಿಲ್ಲ. ಬಾಕಿ ಇರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಾಲ್ಲೂಕಿನಲ್ಲಿ ತತ್ಕಾಲ್ ಪೋಡಿ, ಅಳತೆ ಹಾಗೂ ಸರ್ವೆ ಕಾರ್ಯಗಳು ನಿಧಾನಗತಿಯಲ್ಲಿ ನಡೆಯುತ್ತಿದ್ದು, ಅವುಗಳ ವೇಗ ಹೆಚ್ಚಿಸುವಂತೆ ಶಾಸಕರು ಸೂಚಿಸಿದರು. ಇದೇ ವೇಳೆ ಹಳ್ಳಿಗಳಲ್ಲಿ ಕೃಷಿ ಕಾರ್ಯಕ್ಕಾಗಿ ತೆರಳುವ ರೈತರಿಗೆ ಅನಗತ್ಯ ತೊಂದರೆ ನೀಡಬಾರದು ಎಂದು ಪೊಲೀಸ್ ಇಲಾಖೆಗೆ ಸಲಹೆ ನೀಡಿದರು.
ಸಭೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್, ತಹಸೀಲ್ದಾರ್ ಡಾ. ಎಸ್.ಯು. ಅಶೋಕ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ. ಸುಷ್ಮಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
- ಶ್ರೀನಿವಾಸ್ ಆರ್.
