ಬೆಂಗಳೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಲಿದ್ದು, ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗುವ ಸಾಧ್ಯತೆ ದಟ್ಟವಾಗಿದೆ.
ಮೊದಲಿನಿಂದಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದೆ.ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೇರಲಿದ್ದಾರೆ ಎಂದು ತಿಳಿದುಬಂದಿದೆ.
ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನಕ್ಕೂ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಗಾದಿ ಕೈತಪ್ಪಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಬಿ.ಕೆ.ಹರಿಪ್ರಸಾದ್ ಅವರನ್ನು ಅಂತಿಮಗೊಳಿಸಿದ್ದು, ಹರಿಪ್ರಸಾದ್ ಅವರಿಗೆ ದೂರವಾಣಿ ಕರೆ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
