ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಹುಲಿಕುಂಟೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯು ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೊರಟಗೆರೆ ರೋಟರಿ ಕ್ಲಬ್ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿನಿಯರಿಗೆ ಹಾಗೂ ರೋಟರಿ ಸದಸ್ಯರುಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಕ್ಲಬನ ಚುನಾಯಿತ ಅಧ್ಯಕ್ಷರಾದ ನರಸಿಂಹಮೂರ್ತಿ ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಪರಿಸರ ಮಾಲಿನ್ಯ ಹಾಗೂ ಹವಾಮಾನ ವೈಪರೀತ್ಯಗಳನ್ನು ತಡೆಗಟ್ಟಲು ಮರಗಳ ಸಂರಕ್ಷಣೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.
ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಗಿದ್ದು, ಅವುಗಳ ನಿರ್ವಹಣೆ ಹಾಗೂ ಸಂರಕ್ಷಣೆಗೆ ವಿದ್ಯಾರ್ಥಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಯಿತು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಈ ಕಾರ್ಯಕ್ರಮ ಪ್ರತಿ ಗ್ರಾಮಗಳಲ್ಲಿ ನಗರಗಳಲ್ಲಿ ಪರಿಸರ ಜಾಗೃತಿ ಮೂಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಣಮಿಸಿದೆ .

ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿದರು. ಶಾಲಾ ಸಿಬ್ಬಂದಿ ಹಾಗೂ ಮಕ್ಕಳೊಂದಿಗೆ ರೋಟರಿ ಸಂಸ್ಥಾಪಕ ಅಧ್ಯಕ್ಷರಾದ ಡಿಟಿ ಶ್ರೀನಿವಾಸಮೂರ್ತಿ ಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಹಾಗೂ ಸಿಬ್ಬಂದಿ ವರ್ಗ ಕೊರಟಗೆರೆ ರೋಟರಿ ಕ್ಲಬ್ ನ ಚುನಾಯಿತ ಅಧ್ಯಕ್ಷರಾದ ನರಸಿಂಹಮೂರ್ತಿ ನಿರ್ದೇಶಕರುಗಳಾದ ನಾಗೇಂದ್ರ ಎಚ್ ಎನ್, ಪ್ರಸನ್ನ ಕುಮಾರ್. ಎಸ್ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ವರದಿ. ನರಸಿಂಹಯ್ಯ ಹೊಸಕೋಟೆ
