ಕೊರಟಗೆರೆ :– ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯಕ್ರಮದ ಅಂಗವಾಗಿ 134-ಕೊರಟಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೊರಟಗೆರೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ, ಹೊಸ ಮತದಾರರ ನೋಂದಣಿ, ಹೆಸರು ತಿದ್ದುಪಡಿ, ಸ್ಥಳಾಂತರ ಹಾಗೂ ಮತದಾರರ ಮಾಹಿತಿಯ ನಿಖರತೆ ಕಾಪಾಡುವ ಕುರಿತು ಅಧಿಕಾರಿಗಳಿಗೆ ಸಮಗ್ರ ಮಾಹಿತಿ ನೀಡಲಾಯಿತು.

ತರಬೇತಿ ಕಾರ್ಯಾಗಾರದಲ್ಲಿ ತಹಶೀಲ್ದಾರ್ ಮಂಜುನಾಥ್ ಅವರು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಮಹತ್ವವನ್ನು ವಿವರಿಸಿ, ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಪೂರ್ವ ನಂತರಾಮು ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಉಮೇಶ್ ಅವರು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ, ದಾಖಲೆಗಳ ಪರಿಶೀಲನೆ ಹಾಗೂ ಕ್ಷೇತ್ರಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ವಿವರವಾದ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ರಾಜಸ್ವ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸಭೆಯಲ್ಲಿ ಕರೆ ನೀಡಲಾಯಿತು.
- ಶ್ರೀನಿವಾಸ್ ಕೊರಟಗೆರೆ.
