ಕೊರಟಗೆರೆ, ಜೂ. 8: ತಾಲೂಕಿನ ಅಂಚೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ವಿಶಾಲ್ ಫುಟ್ ಕಾರ್ಖಾನೆಯ ವಿರುದ್ಧ ಗ್ರಾಮಸ್ಥರು ಹಾಗೂ ಸಾರ್ವಜನಿಕ ವಲಯದಿಂದ ಹಲವು ಗಂಭೀರ ಆರೋಪಗಳು ಕೇಳಿಬಂದಿವೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಪರವಾನಿಗೆ ಅವಧಿ ಮೀರಿದ್ದರೂ ಕಾರ್ಖಾನೆ ಕಾರ್ಯಾಚರಣೆ ಮುಂದುವರಿದಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಸ್ಥಳೀಯರ ಪ್ರಕಾರ, ಕಾರ್ಖಾನೆಯ ಮುಂಭಾಗದ ಸಾರ್ವಜನಿಕ ರಸ್ತೆಯ ಎರಡೂ ಬದಿಗಳಲ್ಲಿ ಲಾರಿಗಳು ಹಾಗೂ ಇತರೆ ವಾಹನಗಳನ್ನು ನಿಲ್ಲಿಸಲಾಗುತ್ತಿದ್ದು, ಇದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ. ಹಲವು ಬಾರಿ ಅಪಘಾತಗಳು ಸಂಭವಿಸಿದ್ದರೂ ಅಧಿಕಾರಿಗಳು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳದಿರುವುದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾರ್ಖಾನೆಯಿಂದ ಹೊರಬರುವ ಕಲುಷಿತ ನೀರು ಸಮೀಪದ ಮಲ್ಲೇಶ್ವರ ಕೆರೆಗೆ ಹರಿಯುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಇದರಿಂದ ಕೆರೆಯ ನೀರಿನ ಗುಣಮಟ್ಟ ಹದಗೆಡುತ್ತಿದ್ದು, ಪರಿಸರ ಹಾಗೂ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಗಳ ಕುರಿತು ಪ್ರಶ್ನಿಸಲು ಹೋದವರ ಮೇಲೆ ಕಾರ್ಖಾನೆ ಆಡಳಿತದ ಕೆಲವರು ದರ್ಪದಿಂದ ವರ್ತಿಸಿದ್ದು, ದೌರ್ಜನ್ಯ ನಡೆಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಮೆಡಿಕಲ್ ಹನುಮಂತರಾಜು ಆರೋಪಿಸಿದ್ದಾರೆ. ಈ ಬೆಳವಣಿಗೆ ಸ್ಥಳೀಯರಲ್ಲಿ ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.
ಕಾರ್ಖಾನೆಯ ವಿರುದ್ಧ ಹಲವು ಆರೋಪಗಳು ನಿರಂತರವಾಗಿ ಕೇಳಿಬರುತ್ತಿದ್ದರೂ, ಮಾಲಿನ್ಯ ನಿಯಂತ್ರಣ ಮಂಡಳಿ, ಕಾರ್ಮಿಕ ಇಲಾಖೆ, ಕೈಗಾರಿಕಾ ಸುರಕ್ಷತಾ ಇಲಾಖೆ ಹಾಗೂ ಸ್ಥಳೀಯ ಆಡಳಿತದಿಂದ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರಲ್ಲಿ ಅನುಮಾನ ಮೂಡಿಸಿದೆ. ಅಧಿಕಾರಿಗಳ ಮೌನದ ಹಿಂದೆ ಯಾವುದೇ ಪ್ರಭಾವ ಅಥವಾ ಒತ್ತಡವಿದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
ಕಾರ್ಖಾನೆಯ ಮಾಲಿನ್ಯ ಪರವಾನಿಗೆ, ತ್ಯಾಜ್ಯ ವಿಲೇವಾರಿ ವ್ಯವಸ್ಥೆ, ರಸ್ತೆ ಒತ್ತುವರಿ ಹಾಗೂ ಸುರಕ್ಷತಾ ನಿಯಮಗಳ ಪಾಲನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
