ಕೆ.ಆರ್.ಪೇಟೆ: ತಾಲ್ಲೂಕಿನ ಸಮಗ್ರ ಅಭಿವೃದ್ಧಿಯೇ ತನ್ನ ಪ್ರಮುಖ ಗುರಿಯಾಗಿದ್ದು, 2028ರಲ್ಲಿ ಜೆಡಿಎಸ್-ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಕನಿಷ್ಠ 2 ಸಾವಿರ ಕೋಟಿ ರೂ. ಅನುದಾನ ತರುವುದಾಗಿ ಶಾಸಕ ಹೆಚ್.ಟಿ. ಮಂಜು ಭರವಸೆ ನೀಡಿದರು.
ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ಗಂಗೇನಹಳ್ಳಿ ಗ್ರಾಮದಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಈ ವೇಳೆ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.
ಅಂಬೇಡ್ಕರ್ ಅವರು ದಲಿತರ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ನಾಯಕರು ಎಂದು ಸ್ಮರಿಸಿದ ಶಾಸಕರು, ಬಾಬು ಜಗಜೀವನರಾಂ ಅವರು ಹಸಿರು ಕ್ರಾಂತಿಯ ಹರಿಕಾರರಾಗಿ ಹಾಗೂ ದೇಶದ ರಕ್ಷಣಾ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದವರಾಗಿ ಗುರುತಿಸಿಕೊಂಡಿದ್ದಾರೆ ಎಂದರು.

ಇಂತಹ ಮಹನೀಯರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ದೇಶ ಸೇವೆಯ ನಿಸ್ವಾರ್ಥ ಮನೋಭಾವನೆ ಅವರ ಜೀವನದ ಮುಖ್ಯ ಸಂದೇಶವಾಗಿದೆ ಎಂದು ಹೇಳಿದರು.
ಗ್ರಾಮದಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ನಿರ್ವಹಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದ ಅವರು, ದಲಿತ ಸಮುದಾಯದ ಹಿತಾಸಕ್ತಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧನಿದ್ದೇನೆ ಎಂದರು. ತಾಲ್ಲೂಕಿನ ಜನರು ತಮ್ಮ ಸೇವೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಮುಖಂಡರಾದ ಗಂಗೇನಹಳ್ಳಿ ಕೃಷ್ಣಯ್ಯ, ಸಂಜಯ್, ರಾಮು, ಮಧು, ತಾಲ್ಲೂಕು ಜೆಡಿಎಸ್ ಕಾರ್ಯಾಧ್ಯಕ್ಷ ಮೆಣಸ ಮಹಾದೇವೇಗೌಡ, ಕಿಕ್ಕೇರಿ ಹೋಬಳಿ ಜೆಡಿಎಸ್ ಅಧ್ಯಕ್ಷ ಕಾಯಿ ಮಂಜೇಗೌಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಜಿ. ಪುಟ್ಟರಾಜು, ಕಿಕ್ಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶೇಖರ್, ಕೆ.ಆರ್.ಐ.ಡಿ.ಎಲ್ ಇಂಜಿನಿಯರ್ ಚೇತನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
-ಶ್ರೀನಿವಾಸ್ ಆರ್.
