ಕೊರಟಗೆರೆ: ತಾಲೂಕಿನ ಬೋಡಬಂಡೇನಹಳ್ಳಿ ಬೈಪಾಸ್ ರಸ್ತೆ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ವ್ಯಕ್ತಿಯು ವಿಕಲಚೇತನರಾಗಿದ್ದು, ಅವರ ಹೆಸರು, ವಿಳಾಸ ಸೇರಿದಂತೆ ಯಾವುದೇ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೊರಟಗೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ತೀರ್ಥೇಶ್, ಸರ್ಕಲ್ ಇನ್ಸ್ಪೆಕ್ಟರ್ ಪುರುಷೋತ್ತಮ್ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮೃತ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ಅವರ ಗುರುತು ಪರಿಚಯವಿದ್ದಲ್ಲಿ ತಕ್ಷಣ ಕೊರಟಗೆರೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಘಟನಾ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾದ ಬಳಿಕ ಸಾವಿನ ನಿಖರ ಕಾರಣ ತಿಳಿಯುವ ಸಾಧ್ಯತೆ ಇದೆ.
– ಶ್ರೀನಿವಾಸ್ ಕೊರಟಗೆರೆ.
