ರಾಮನಾಥಪುರ, ಜೂನ್ 23: ಅರಕಲಗೂಡು ತಾಲೂಕಿನಾದ್ಯಂತ ಸ್ಥಾಪಿಸಲಾಗಿರುವ “ಮಕ್ಕಳ ಮನೆ” ಕೇಂದ್ರಗಳು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ಒದಗಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿವೆ ಎಂದು ಮಾಜಿ ಸಚಿವರು ಹಾಗೂ ಅರಕಲಗೂಡು ಕ್ಷೇತ್ರದ ಶಾಸಕ ಎ. ಮಂಜು ಹೇಳಿದರು.
ರಾಮನಾಥಪುರ ಹೋಬಳಿಯ ಬೋರೆಕೊಪ್ಪಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆರಂಭಿಸಲಾದ ಅರಕಲಗೂಡು ತಾಲ್ಲೂಕಿನ ಮಹತ್ವಾಕಾಂಕ್ಷಿ “ಮಕ್ಕಳ ಮನೆ” ಯೋಜನೆಯ 19ನೇ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಾಲೂಕಿನ 19 ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಮಕ್ಕಳ ಮನೆ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಪೋಷಕರು ಹಾಗೂ ಗ್ರಾಮೀಣ ಭಾಗದ ಜನರಿಂದ ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ದಾಖಲಾತಿಗಾಗಿ ಪೋಷಕರು ಮುಂಚಿತವಾಗಿಯೇ ಕರೆ ಮಾಡಿ ನೋಂದಣಿ ಮಾಡಿಸುತ್ತಿದ್ದಾರೆ ಎಂದು ತಿಳಿಸಿದರು.

ಖಾಸಗಿ ಶಾಲೆಗಳ ಮಟ್ಟದ ಶಿಕ್ಷಣ, ಕಲಿಕಾ ಚಟುವಟಿಕೆಗಳು ಹಾಗೂ ಮಕ್ಕಳ ಸಮಗ್ರ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಮಕ್ಕಳ ಮನೆಗಳಲ್ಲಿ ಕಲ್ಪಿಸಲಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಈ ಕೇಂದ್ರದಲ್ಲಿ ಎಲ್ಕೆಜಿ ಹಾಗೂ ಯುಕೆಜಿ ಮಕ್ಕಳಿಗಾಗಿ ವಿಶೇಷ ಕಲಿಕಾ ವ್ಯವಸ್ಥೆ ರೂಪಿಸಲಾಗಿದ್ದು, ಉದ್ಘಾಟನೆ ವೇಳೆ ಮಕ್ಕಳಿಗೆ ಉಚಿತ ಸಮವಸ್ತ್ರ, ಶಾಲಾ ಬ್ಯಾಗ್ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಭಾಗವಹಿಸಿ ಮಕ್ಕಳ ಮನೆ ಯೋಜನೆಯ ಯಶಸ್ಸಿಗೆ ಶುಭ ಹಾರೈಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಅರಕಲಗೂಡು ತಾಲೂಕು ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತಿದ್ದು, ಮಕ್ಕಳ ಮನೆ ಯೋಜನೆಯು ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಶಾಸಕ ಎ. ಮಂಜು ಅಭಿಪ್ರಾಯಪಟ್ಟರು.
ವರದಿ: ಎಂ.ಎನ್. ಕುಮಾರಸ್ವಾಮಿ, ರಾಮನಾಥಪುರ.
