ಹಾಸನ, ಜೂನ್ 24: ಪುಣ್ಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಹಾಸನ ಹಾಗೂ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ಬುಧವಾರ ಆಸ್ಪತ್ರೆಯ ಆವರಣದಲ್ಲಿ ಉಚಿತ ನರರೋಗ ಸಲಹೆ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ಶಿಬಿರದಲ್ಲಿ ಸುಮಾರು 200ಕ್ಕೂ ಹೆಚ್ಚು ಮಂದಿ ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡು ತಜ್ಞ ವೈದ್ಯರಿಂದ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ಪಡೆದರು.
ಕಾರ್ಯಕ್ರಮದಲ್ಲಿ ಪುಣ್ಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಡಾ. ಮಹೇಶ್, ಡಾ. ಹರೀಶ್, ಡಾ. ಮೊಹಿಸ್ಸಿ ಜರೀರ್ ಅಹಮದ್ ಹಾಗೂ ಆಸ್ಪತ್ರೆಯ ಇತರ ವೈದ್ಯರು ಮತ್ತು ಸಿಬ್ಬಂದಿ ವರ್ಗ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷ ರೋ. ಎಚ್.ಡಿ. ವಜ್ರಕುಮಾರ್, ಕಾರ್ಯದರ್ಶಿ ಕೆ.ಎಸ್. ಯೋಗೇಶ್, ಸದಸ್ಯರಾದ ರೋ. ದರ್ಶನ್, ರೋ. ರಾಜೇಶ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಿಬಿರವು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಇಂತಹ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಆಯೋಜಕರು ಅಭಿಪ್ರಾಯಪಟ್ಟರು.
ಶಿಬಿರದ ಯಶಸ್ಸಿಗೆ ಸಹಕರಿಸಿದ ವೈದ್ಯರು, ಸಿಬ್ಬಂದಿ, ರೋಟರಿ ಕ್ಲಬ್ ಸದಸ್ಯರು ಹಾಗೂ ಭಾಗವಹಿಸಿದ ಸಾರ್ವಜನಿಕರಿಗೆ ಆಯೋಜಕರು ಕೃತಜ್ಞತೆ ಸಲ್ಲಿಸಿದರು.
