ಕೊರಟಗೆರೆ:- ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರ ಸಹಭಾಗಿತ್ವ ಅಗತ್ಯವಾಗಿದ್ದು, ತಾಲ್ಲೂಕಿನ 0 ರಿಂದ 5 ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ಪೋಷಕರು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಜ್ಯೋತ್ಸ ರೆಡ್ಡಿ ಮನವಿ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊರಟಗೆರೆ ರೋಟರಿ ಕ್ಲಬ್ನ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲ್ಲೂಕಿನ 69 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ನಾಲ್ಕು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಿರುವ ವಿಶೇಷ ಬೂತ್ಗಳಲ್ಲಿ 0–5 ವರ್ಷದ ಮಕ್ಕಳಿಗೆ ಉಚಿತವಾಗಿ ಪೋಲಿಯೋ ಲಸಿಕೆ ನೀಡಲಾಗುತ್ತಿದೆ. ಒಟ್ಟು 10,016 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಮೂರು ದಿನಗಳ ಕಾಲ ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಿದ್ದಾರೆ ಎಂದು ತಿಳಿಸಿದರು.
‘ಎಂಡ್ ಪೋಲಿಯೋ ನೌ’ ಅಭಿಯಾನಕ್ಕೆ ರೋಟರಿ ಬೆಂಬಲ
ಕೊರಟಗೆರೆ ರೋಟರಿ ಕ್ಲಬ್ ಅಧ್ಯಕ್ಷ ಎ.ಜಿ. ಮಂಜುನಾಥ್ ಮಾತನಾಡಿ, ಕಳೆದ 35 ವರ್ಷಗಳಿಂದ ರೋಟರಿ ಇಂಟರ್ನ್ಯಾಷನಲ್ ‘ಎಂಡ್ ಪೋಲಿಯೋ ನೌ’ ಅಭಿಯಾನವನ್ನು ಯಶಸ್ವಿಯಾಗಿ ನಡೆಸುತ್ತಿದ್ದು, ಕೊರಟಗೆರೆ ತಾಲ್ಲೂಕಿನ ಪ್ರತಿಯೊಂದು ಗ್ರಾಮ ಹಾಗೂ ಮನೆಗಳಿಗೆ ಸದಸ್ಯರು ಭೇಟಿ ನೀಡಿ ಅಭಿಯಾನವನ್ನು ಯಶಸ್ವಿಗೊಳಿಸಲಿದ್ದಾರೆ ಎಂದರು.

ರೋಟರಿ ಚಾರ್ಟರ್ಡ್ ಅಧ್ಯಕ್ಷ ಶ್ರೀನಿವಾಸ ಮೂರ್ತಿ ಮಾತನಾಡಿ, ಸರ್ಕಾರದೊಂದಿಗೆ ಕೈಜೋಡಿಸಿ ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವುದು ರೋಟರಿಯ ಧ್ಯೇಯವಾಗಿದ್ದು, ಈ ಬಾರಿ ಶೇ.100ರಷ್ಟು ಲಸಿಕಾ ಗುರಿ ಸಾಧಿಸಲು ಸಾರ್ವಜನಿಕರು ಸಹಕರಿಸಬೇಕು ಹಾಗೂ ವದಂತಿಗಳಿಗೆ ಕಿವಿಗೊಡಬಾರದು ಎಂದು ಕರೆ ನೀಡಿದರು.
ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಮಕೃಷ್ಣ ಮಾತನಾಡಿ, ಆಸ್ಪತ್ರೆಯಲ್ಲಿ ಲಸಿಕೆ ವಿತರಣೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಮೂರು ದಿನಗಳ ಕಾಲ ಬೂತ್ಗಳಲ್ಲಿಯೂ ಹಾಗೂ ಮನೆ ಮನೆಗೆ ತೆರಳಿ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು.

ಡಾ. ರವೀಶ್ ಮಾತನಾಡಿ, ಪೋಲಿಯೋ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದ್ದು ಯಾವುದೇ ಅಡ್ಡ ಪರಿಣಾಮಗಳಿಲ್ಲ. ಒಂದೇ ಒಂದು ಮಗು ಲಸಿಕೆಯಿಂದ ವಂಚಿತವಾದರೂ ರೋಗ ಹರಡುವ ಅಪಾಯ ಇರುವುದರಿಂದ ಎಲ್ಲ ಪೋಷಕರೂ ಜವಾಬ್ದಾರಿಯಿಂದ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿ ಗಂಗಾಧರ್, ತಾ.ಪಂ. ಎಡಿಒ ಗುರುಮೂರ್ತಿ, ಡಾ. ಆತ್ಮರಾಮ್ ಶೆಟ್ಟಿ, ಜಿಲ್ಲಾ ನೋಡಲ್ ಅಧಿಕಾರಿ ನಾಗರಾಜು ಪಾಟೀಲ್, ರೋಟರಿ ನಿರ್ದೇಶಕ ಪ್ರಸನ್ನಕುಮಾರ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
– ಶ್ರೀನಿವಾಸ್, ಕೊರಟಗೆರೆ.
