ರಾಮನಾಥಪುರ, ಜು. 2: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕೇರಳಾಪುರದ ಯುವ ಉದ್ಯಮಿ ಹಾಗೂ ಸಮಾಜಸೇವಕ ಎಸ್.ವಿ. ಉಮಾಶಂಕರ್ ಅವರು ನಳಂದ ಪ್ರಾಥಮಿಕ ಶಾಲೆಯ 50 ವಿದ್ಯಾರ್ಥಿಗಳಿಗೆ ಒಂದು ವರ್ಷದ ಅವಧಿಗೆ ಸಂಯುಕ್ತ ಕರ್ನಾಟಕ ದಿನಪತ್ರಿಕೆಯೊಂದಿಗೆ ಪ್ರಕಟವಾಗುವ ‘ಜಾಣರ ಗುರು’ ಪತ್ರಿಕೆಯನ್ನು ಉಚಿತವಾಗಿ ವಿತರಿಸುವ ಯೋಜನೆಗೆ ಚಾಲನೆ ನೀಡಿದರು.
ಕೇರಳಾಪುರದ ನಳಂದ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದ ಎಸ್.ವಿ. ಉಮಾಶಂಕರ್, ಶಿಕ್ಷಕರು ಪ್ರತಿಯೊಬ್ಬ ಮಗುವಿನ ಭವಿಷ್ಯವನ್ನು ರೂಪಿಸುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದ್ದು, ಸಮಾಜ ನಿರ್ಮಾಣದಲ್ಲಿ ಅವರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.

ಪತ್ರಿಕೆಗಳನ್ನು ಓದುವ ಅಭ್ಯಾಸ ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಸ್ಪರ್ಧಾತ್ಮಕ ಯುಗದಲ್ಲಿ ಅಗತ್ಯವಾದ ಮಾಹಿತಿಯನ್ನು ಪಡೆದುಕೊಳ್ಳಲು ನೆರವಾಗುತ್ತದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ದೇಶದ ಆಸ್ತಿಯಾಗಬೇಕು ಎಂದು ಅವರು ಕರೆ ನೀಡಿದರು.

ಈ ಹಿಂದೆ ಬಡತನ ಹಾಗೂ ಶಾಲೆಗಳ ದೂರದ ಕಾರಣದಿಂದ ಅನೇಕ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಭಾಗಗಳಲ್ಲಿಯೂ ಗುಣಮಟ್ಟದ ಶಿಕ್ಷಣ ಲಭ್ಯವಾಗುತ್ತಿದ್ದು, ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಪ್ರತಿ ಗ್ರಾಮದಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಬೆಳೆಯುವ ಮೂಲಕ ಬಡ ಹಾಗೂ ದೀನದಲಿತ ಮಕ್ಕಳ ಶಿಕ್ಷಣಕ್ಕೆ ಇನ್ನಷ್ಟು ಉತ್ತೇಜನ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ನಳಂದ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಷಮ್ಮಖ ಶೆಟ್ಟಿ, ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಭಕ್ತ ಬಳಗದ ಜಿಲ್ಲಾಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಯುವ ಘಟಕದ ಅಧ್ಯಕ್ಷ ಆರ್.ಕೆ. ಶ್ರೀನಿವಾಸ್, ಮುಖ್ಯ ಶಿಕ್ಷಕ ಮಂಜುನಾಥ್, ಮುಖಂಡರಾದ ಜಿ.ಟಿ. ಮಧು, ಕೆ.ಬಿ. ಅನಿಲ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
