ಹುಬ್ಬಳ್ಳಿ, ಜು. 3: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತೊಮ್ಮೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ರಾಮನಗರದಲ್ಲಿ ಅಕ್ರಮ ಆರೋಪ ಕೇಳಿಬಂದ ಬೆನ್ನಲ್ಲೇ, ಇದೀಗ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲೂ ನಿಯಮ ಉಲ್ಲಂಘನೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ತಮ್ಮ ಎಕ್ಸ್ (X) ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 63, ಬೂತ್ ಸಂಖ್ಯೆ 16ರಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಚುನಾವಣಾ ಆಯೋಗದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಜೋಶಿ ಅವರ ಆರೋಪದ ಪ್ರಕಾರ, ಸಂಬಂಧಿತ ಬಿಎಲ್ಒ ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಬದಲು ಒಂದೇ ಸ್ಥಳದಲ್ಲಿ ಕುಳಿತು ಎನ್ಯೂಮರೇಷನ್ ಫಾರ್ಮ್ಗಳನ್ನು ಭರ್ತಿ ಮಾಡುತ್ತಿದ್ದರು. ಈ ಬಗ್ಗೆ ಬಿಜೆಪಿ ಬಿಎಲ್ಎ-2 ನೀಡಿದ ದೂರಿನ ಮೇರೆಗೆ ಬಿಎಲ್ಎ-1 ಸ್ಥಳಕ್ಕೆ ಭೇಟಿ ನೀಡಿ ವಿಡಿಯೋ ಸೇರಿದಂತೆ ಸಾಕ್ಷ್ಯ ಸಂಗ್ರಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಚುನಾವಣಾ ಆಯೋಗದ ನಿಯಮಗಳನ್ನು ಕಡೆಗಣಿಸಿ ಸಾಂವಿಧಾನಿಕ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಪ್ರಲ್ಹಾದ್ ಜೋಶಿ, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಇದರ ಹಿಂದಿರುವವರ ವಿರುದ್ಧ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಶಿಗ್ಗಾಂವಿ-ಸವಣೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇದೇ ರೀತಿಯ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ನಿಯಮವನ್ನು ಪಾಲಿಸಲಾಗುತ್ತಿಲ್ಲ ಎಂದು ಹೇಳಿದ್ದಾರೆ. ಕೆಲವೆಡೆ ಮಸೀದಿಯಲ್ಲಿ ಕುಳಿತು ಎನ್ಯೂಮರೇಷನ್ ಫಾರ್ಮ್ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.
ಈ ಆರೋಪಗಳ ಕುರಿತು ಸ್ವತಂತ್ರ ಹಾಗೂ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಲ್ಹಾದ್ ಜೋಶಿ ಒತ್ತಾಯಿಸಿದ್ದಾರೆ.
ಹೈಲೈಟ್ಸ್:
- ಹುಬ್ಬಳ್ಳಿ-ಧಾರವಾಡದಲ್ಲೂ ಎಸ್ಐಆರ್ ಅಕ್ರಮ ಆರೋಪ
- ವಿಡಿಯೋ ಬಿಡುಗಡೆ ಮಾಡಿ ಕಠಿಣ ಕ್ರಮಕ್ಕೆ ಆಗ್ರಹಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
- ಮನೆ-ಮನೆಗೆ ಭೇಟಿ ನೀಡದೆ ಫಾರ್ಮ್ ಭರ್ತಿ ಮಾಡಿದ ಆರೋಪ
- ಚುನಾವಣಾ ಆಯೋಗದ ನಿಯಮ ಉಲ್ಲಂಘನೆ ಆರೋಪಕ್ಕೆ ಸಮಗ್ರ ತನಿಖೆ ಒತ್ತಾಯ
- ರಾಮನಗರ ಬಳಿಕ ಮತ್ತೊಂದು ಜಿಲ್ಲೆಯಲ್ಲಿ ಎಸ್ಐಆರ್ ವಿವಾದ ತೀವ್ರ
