ಹಾಸನ, ಜು. 6: ನಗರದ ಪ್ರತಿಷ್ಠಿತ ಆಚಾರ್ಯ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಪದವಿ ಘಟಿಕೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಅತಿಥಿಗಳು ಹಾಗೂ ಪದವೀಧರ ವಿದ್ಯಾರ್ಥಿಗಳನ್ನು ಪದವೀಧರ ಸಮವಸ್ತ್ರದಲ್ಲಿ ಮೆರವಣಿಗೆಯ ಮೂಲಕ ವೇದಿಕೆಗೆ ಕರೆತರಲಾಯಿತು. ಬಳಿಕ ನಾಡಗೀತೆ, ಪ್ರಾರ್ಥನಾ ಗೀತೆ ಹಾಗೂ ದೀಪಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಕುಮಾರಿ ಶ್ವೇತಾ ಬಿ.ಎಲ್. ಪದವೀಧರರಿಗೆ ಪ್ರಮಾಣವಚನ ಬೋಧಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜು ಡಿ.ಎಸ್. ಮಾತನಾಡಿ, ವಿದ್ಯಾರ್ಥಿಗಳು ಪಡೆಯುವ ಅನೇಕ ಪದವಿಗಳಲ್ಲಿ ಇದು ಮೊದಲ ಹೆಜ್ಜೆಯಾಗಿದ್ದು, ಜೀವನದಲ್ಲಿ ನಿರಂತರ ಕಲಿಕೆ ಮತ್ತು ಪರಿಶ್ರಮವೇ ಯಶಸ್ಸಿನ ಮೂಲ ಎಂದು ತಿಳಿಸಿದರು. ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡು ಪದವೀಧರರಿಗೆ ಶುಭ ಹಾರೈಸಿದರು.

ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ನಾಡಶ್ರೀ ಬಾ.ನಂ. ಲೋಕೇಶ್ ಮಾತನಾಡಿ, ಜೀವನದಲ್ಲಿ ಭೂತ, ವರ್ತಮಾನ ಹಾಗೂ ಭವಿಷ್ಯದ ಎಲ್ಲ ಹಂತಗಳಲ್ಲಿಯೂ ಸವಾಲುಗಳು ಸಹಜ. ಉದ್ಯೋಗ ಅರಸುವವರಾಗುವುದಕ್ಕಿಂತ ಉದ್ಯೋಗ ಸೃಷ್ಟಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಗೆಲುವಿನಲ್ಲಿ ಅಹಂಕಾರ ಪಡದೆ, ಸೋಲಿನಲ್ಲಿ ಕುಗ್ಗದೆ ಆತ್ಮವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ನಿಶ್ಚಿತ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಧ್ಯಕ್ಷ ಡಾ. ಆದರ್ಶ ಎಚ್.ಆರ್. ಮಾತನಾಡಿ, “ಸೂರ್ಯನಂತೆ ಬೆಳಗಬೇಕಾದರೆ ಸೂರ್ಯನಂತೆ ಉರಿಯಲು ಸಿದ್ಧರಾಗಬೇಕು. ವಿದ್ಯಾರ್ಥಿಗಳು ತಮ್ಮ ಸಾಧನೆಯನ್ನು ಪೋಷಕರಿಗೆ ಸಮರ್ಪಿಸಿದಾಗ ಜೀವನ ಸಾರ್ಥಕವಾಗುತ್ತದೆ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವೇದಿಕೆಯಲ್ಲಿ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ತೇಜಸ್ ಕುಮಾರ್ ಸಿ.ಎಲ್. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ವೇದಮೂರ್ತಿ ಪಿ.ಬಿ., ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ಚಂದ್ರಶೇಖರ್, ಕಾಲೇಜಿನ ಉಪನ್ಯಾಸಕರು, ಪದವೀಧರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಭಾಗವಹಿಸಿದ್ದರು.
