ಮಧುಗಿರಿ, ಜು.10: ಮಧುಗಿರಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿರುವ ಅಂಗಡಿ ಮಳಿಗೆಗಳಲ್ಲಿ ನಡೆಯುತ್ತಿರುವ ನಿಯಮ ಉಲ್ಲಂಘನೆ ಹಾಗೂ ಒತ್ತುವರಿ ಸಮಸ್ಯೆಗೆ ಇನ್ನೂ ಶಾಶ್ವತ ಪರಿಹಾರ ದೊರಕಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಕುರಿತು ಪತ್ರಿಕೆಗಳಲ್ಲಿ ವರದಿ ಪ್ರಕಟವಾದ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರೂ, ಇದುವರೆಗೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಅಂಗಡಿ ಮಾಲೀಕರು ಅವರಿಗೆ ನಿಗದಿಪಡಿಸಿರುವ ಮಳಿಗೆಗಳ ವ್ಯಾಪ್ತಿಯನ್ನು ಮೀರಿ ಸಾರ್ವಜನಿಕರು ಓಡಾಡುವ ಸ್ಥಳದಲ್ಲೇ ವಿವಿಧ ವಸ್ತುಗಳನ್ನು ಇಟ್ಟು ವ್ಯಾಪಾರ ನಡೆಸುತ್ತಿದ್ದಾರೆ. ಇದರಿಂದ ಪ್ರಯಾಣಿಕರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಮಹಿಳೆಯರು ಬಸ್ ನಿಲ್ದಾಣದಲ್ಲಿ ಸುಗಮವಾಗಿ ಸಂಚರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ಪತ್ರಿಕಾ ವರದಿಯ ನಂತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ, ಒತ್ತುವರಿ ತೆರವುಗೊಳಿಸುವುದು ಅಥವಾ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಯಾವುದೇ ಮುಂದಾಳತ್ವ ವಹಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳ ಈ ನಿರ್ಲಕ್ಷ್ಯವೇ ನಿಯಮ ಉಲ್ಲಂಘಿಸುವವರಿಗೆ ಪರೋಕ್ಷ ಬೆಂಬಲ ನೀಡಿದಂತಾಗಿದೆ ಎಂಬ ಅಭಿಪ್ರಾಯವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ಇದಲ್ಲದೆ, ಬಸ್ ನಿಲ್ದಾಣ ಆವರಣದಲ್ಲಿ ಸಿಗರೇಟ್ ಹಾಗೂ ಗುಟ್ಕಾ ಮಾರಾಟವೂ ನಿರಂತರವಾಗಿ ನಡೆಯುತ್ತಿದ್ದು, ಸಂಬಂಧಪಟ್ಟ ಇಲಾಖೆಗಳು ಇದನ್ನು ತಡೆಯುವಲ್ಲಿ ವಿಫಲವಾಗಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಈ ರೀತಿಯ ಮಾರಾಟ ನಡೆಯುತ್ತಿರುವುದು ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದಲೂ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದ್ದಾರೆ.
ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಬಸ್ ನಿಲ್ದಾಣದಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಎಲ್ಲಾ ಒತ್ತುವರಿಗಳನ್ನು ತಕ್ಷಣ ತೆರವುಗೊಳಿಸಿ, ನಿಯಮ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ನಡುವೆ, ಪತ್ರಿಕಾ ವರದಿ ಪ್ರಕಟವಾದ ಬಳಿಕ ಅಧಿಕಾರಿಗಳು ಪರಿಶೀಲನೆ ನಡೆಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. “ಪರಿಶೀಲನೆ ಕೇವಲ ಕಾಟಾಚಾರಕ್ಕಾಗಿತ್ತೇ? ಅಥವಾ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಯಾವುದಾದರೂ ಒತ್ತಡವಿದೆಯೇ?” ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
ಸಂಬಂಧಪಟ್ಟ ಕೆಎಸ್ಆರ್ಟಿಸಿ ಹಾಗೂ ಪುರಸಭೆ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿ, ಬಸ್ ನಿಲ್ದಾಣದಲ್ಲಿ ನಿಯಮ ಪಾಲನೆ ಖಚಿತಪಡಿಸಿ ಸಾರ್ವಜನಿಕರ ವಿಶ್ವಾಸ ಉಳಿಸಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.
ವರದಿ- ನರಸಿಂಹಯ್ಯ
