ಕೊರಟಗೆರೆ, ಜು.10: ತುಮಕೂರಿನ ಬಿ.ಎಲ್.ಒ. ಧಾರಣ ಅವರ ಸಾವಿನ ಪ್ರಕರಣಕ್ಕೆ ನ್ಯಾಯ ಒದಗಿಸಬೇಕು ಹಾಗೂ ಎಸ್ಐಆರ್ ಕಾರ್ಯದಲ್ಲಿ ನಿರತರಾಗಿರುವ ಬಿ.ಎಲ್.ಒ.ಗಳ ಮೇಲೆ ಅನಗತ್ಯ ಒತ್ತಡ ಹೇರದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಗುರುವಾರ ಕೊರಟಗೆರೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ, ಸರ್ಕಾರಿ ಸಿಬ್ಬಂದಿಗೆ ಒತ್ತಡರಹಿತ ಹಾಗೂ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ನರಸಿಂಹರಾಜು, ಬಿ.ಎಲ್.ಒ.ಗಳಿಗೂ ಕುಟುಂಬದ ಜವಾಬ್ದಾರಿಗಳಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ಅತಿಯಾದ ಒತ್ತಡ ಹೇರುವುದು ಸೂಕ್ತವಲ್ಲ ಎಂದು ಹೇಳಿದರು. ತುಮಕೂರಿನಲ್ಲಿ ನಡೆದಿರುವಂತಹ ದುರ್ಘಟನೆಗಳು ಮರುಕಳಿಸದಂತೆ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಮಾನವೀಯ ದೃಷ್ಟಿಕೋನದಿಂದ ವರ್ತಿಸಬೇಕು. ಕೆಲಸದ ಒತ್ತಡದಿಂದ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕದಂತೆ ಸಮರ್ಪಕ ವ್ಯವಸ್ಥೆ ರೂಪಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪ್ರತಿಭಟನೆಯ ಬಳಿಕ ಉಪತಹಶೀಲ್ದಾರ್ ನರಸಿಂಹಮೂರ್ತಿ ಮನವಿ ಸ್ವೀಕರಿಸಿ, ಸರ್ಕಾರದ ಗಮನಕ್ಕೆ ವಿಷಯವನ್ನು ತಲುಪಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ, ಬಿ.ಎಲ್.ಒ. ಧಾರಣ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಸರ್ಕಾರಿ ಸಿಬ್ಬಂದಿಯ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.
– ಶ್ರೀನಿವಾಸ್ ಕೊರಟಗೆರೆ
