ಹಾಸನ, ಜು.10: ಭೋವಿ ಸಮಾಜದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಐಕ್ಯತೆಯನ್ನು ಬಲಪಡಿಸುವ ಉದ್ದೇಶದಿಂದ ಜುಲೈ 19ರಂದು ಚಿತ್ರದುರ್ಗದ ಶ್ರೀ ಶಿವಯೋಗಿ ಸಿದ್ಧರಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠದಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಭೋವಿ ಮಹಾಸಭೆಯ ರಾಜ್ಯಾಧ್ಯಕ್ಷ ಹೆಚ್. ಮಂಜಪ್ಪ ತಿಳಿಸಿದರು.
ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ. ಸೀತರಾಮ್, ಭೋವಿ ಗುರುಪೀಠದ ಇಮ್ಮಂಡಿ ಸಿದ್ಧರಮೇಶ್ವರ ಮಹಾಸ್ವಾಮಿಗಳ 40ನೇ ಜನ್ಮದಿನದ ಅಂಗವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭೋವಿ ಸಮಾಜದ ಬಂಧುಗಳು, ಮಠಾಧೀಶರು, ಜನಪ್ರತಿನಿಧಿಗಳು, ಸಮಾಜದ ಮುಖಂಡರು, ಯುವಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸುವ ನಿರೀಕ್ಷೆಯಿದ್ದು, ವಿವಿಧ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ನಿಗಮ-ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ಸಮಾಜದ ಸಂಘಟನಾ ಬಲವನ್ನು ಪ್ರದರ್ಶಿಸುವುದರ ಜೊತೆಗೆ ಸಮಾಜದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಸರ್ಕಾರದ ಗಮನಕ್ಕೆ ತರುವ ವೇದಿಕೆಯಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಭೋವಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಜೊತೆಗೆ ವಧು-ವರರ ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಚಿತ್ರಕಲಾ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಭೋವಿ ಸಮಾಜದ ಹಲವು ವರ್ಷಗಳ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗುವುದು. ಸಮಾಜದ ಸಾಮಾಜಿಕ ಹಾಗೂ ಶೈಕ್ಷಣಿಕ ಹಿಂದುಳಿದಿರುವ ಸ್ಥಿತಿಯನ್ನು ಪರಿಗಣಿಸಿ ಒಳಮೀಸಲಾತಿಯನ್ನು ಮರುಪರಿಶೀಲಿಸಬೇಕು, ಭೋವಿ ಸಮಾಜದ ಶಾಸಕರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕು, ವಿಧಾನ ಪರಿಷತ್ ಹಾಗೂ ವಿವಿಧ ನಿಗಮ-ಮಂಡಳಿಗಳಲ್ಲಿ ಸಮಾಜಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಲಾಗುವುದು ಎಂದರು.
ಇದಲ್ಲದೆ, ಪಾರಂಪರಿಕ ಕಲ್ಲು ಕಸುಬು ಹಾಗೂ ಕಟ್ಟಡ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವುದು, 3ಎಫ್ ಅಡಿಯಲ್ಲಿ ಸಲ್ಲಿಕೆಯಾಗಿರುವ ಗಣಿಗಾರಿಕೆ ಮಂಜೂರಾತಿ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವುದು ಹಾಗೂ ಸಮಾಜದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಸೌಲಭ್ಯಗಳು, ಯುವಕರಿಗೆ ಉದ್ಯೋಗ ಹಾಗೂ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ತಿಳಿಸಿದರು.
ಹಾಸನ ಜಿಲ್ಲೆಯ ಭೋವಿ ಸಮಾಜದ ಬಂಧುಗಳು, ಯುವಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಾಷ್ಟ್ರೀಯ ಭೋವಿ ಜನೋತ್ಸವದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಹಾಸನ ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ಸಂದೀಪ್, ಮೈಸೂರು ವಿಭಾಗದ ಅಧ್ಯಕ್ಷ ವಿಜಯಕುಮಾರ್, ನಿವೃತ್ತ ಶಿಕ್ಷಕ ಲಕ್ಷ್ಮಪ್ಪ, ದಿಲೀಪ್, ರಾಮಸ್ವಾಮಿ, ಬಸವರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
