ರಾಮನಾಥಪುರ, ಜು.13: ದೇಶದ ಅಭಿವೃದ್ಧಿ ಮತ್ತು ಬದಲಾವಣೆ ಶಿಕ್ಷಣದ ಮೂಲಕವೇ ಸಾಧ್ಯ. ಆದ್ದರಿಂದ ರೈತರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರದ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಮಾಜಿ ಸಚಿವರು ಹಾಗೂ ಅರಕಲಗೂಡು ಶಾಸಕ ಎ. ಮಂಜು ಕರೆ ನೀಡಿದರು.
ರಾಮನಾಥಪುರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕ್ರೀಡಾ, ಸಾಂಸ್ಕೃತಿಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ, ಉತ್ತಮ ಸಮಾಜ ನಿರ್ಮಾಣದ ಶಿಲ್ಪಿಗಳಾಗಿದ್ದಾರೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಮಾಜದ ಅಭಿವೃದ್ಧಿಗೆ ಪರಸ್ಪರ ಪೂರಕವಾಗಿದ್ದು, ಶಿಕ್ಷಣವೇ ದೇಶದ ಪ್ರಗತಿಯ ಮೂಲ ಆಧಾರವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಎಂ.ಎಸ್. ಸರ್ವಮಂಗಳ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಎಸ್.ಟಿ. ಕೃಷ್ಣೇಗೌಡ, ಉಪಾಧ್ಯಕ್ಷೆ ರೂಪದೇವಿ ಮಹದೇವ್, ಎಂ.ಎಂ. ಸ್ವಾಮಿ, ಸದಸ್ಯರಾದ ಸುಹಾಸ್, ಮೈಕ್ ಮಂಜು, ಜಿ.ಎಸ್. ಭರತ್, ಆರ್.ಎಂ. ಸಿದ್ದಯ್ಯ, ರೂಪಾ ರಮೇಶ್, ಎಂ.ಎನ್. ಕುಮಾರಸ್ವಾಮಿ, ಶಾಸಕರ ಆಪ್ತ ಸಹಾಯಕ ಸುನೀಲ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
