ಚನ್ನರಾಯಪಟ್ಟಣ, ಜು.22: ತಾಲ್ಲೂಕಿನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಶೇ.85.41ರಷ್ಟು ಗುರಿ ಸಾಧಿಸಲಾಗಿದ್ದು, ಜುಲೈ 29 ಅಥವಾ 30ರೊಳಗೆ ಶೇ.100ರಷ್ಟು ಪರಿಷ್ಕರಣೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಧಿಕಾರಿಗಳು ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಭಾರತ ಸರ್ಕಾರ ಹಾಗೂ ಚುನಾವಣಾ ಆಯೋಗದ ಮಹತ್ವದ ಕಾರ್ಯಕ್ರಮವಾಗಿದೆ. ಚನ್ನರಾಯಪಟ್ಟಣ ನಗರ ಪ್ರದೇಶದಲ್ಲಿ ಪರಿಷ್ಕರಣೆ ಪ್ರಮಾಣ ಶೇ.60ಕ್ಕಿಂತ ಕಡಿಮೆ ಇರುವುದರಿಂದ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ನಿಗದಿತ ಅವಧಿಯೊಳಗೆ ಕಾರ್ಯ ಪೂರ್ಣಗೊಳಿಸುವಂತೆ ಚುನಾವಣಾಧಿಕಾರಿಗಳಿಗೆ ಸಲಹೆ ನೀಡಿದರು.
ತಾಲ್ಲೂಕು ಆಸ್ತಿ ತೆರಿಗೆ ಸಂಗ್ರಹದಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವುದನ್ನು ಉಲ್ಲೇಖಿಸಿದ ಅವರು, ಪಡಿತರ ಚೀಟಿ ಪರಿಶೀಲನೆ ವೇಳೆ 1,829 ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಉದ್ಯೋಗಕ್ಕಾಗಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ತೆರಳಿರುವ ಕುಟುಂಬಗಳ ಕಾರಣದಿಂದ ಕೆಲವು ಕಾರ್ಡ್ಗಳು ರದ್ದಾಗಿದ್ದು, ಗ್ರಾಮದಲ್ಲಿ ವಾಸಿಸುವ ಅರ್ಹ ಫಲಾನುಭವಿಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ತಾಲ್ಲೂಕಿನ ಬಸವನಪುರ, ಕಂಠೀರಾಯಪುರ ಹಾಗೂ ನರೇನಹಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಖಾಸಗಿ ಹಾಗೂ ಪರ್ಯಾಯ ವ್ಯವಸ್ಥೆಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಅಗತ್ಯವಿದ್ದರೆ ಹೊಸ ಕೊಳವೆಬಾವಿ ಕೊರೆಸಿ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಮಾಹಿತಿ ನೀಡಿ, ತಾಲ್ಲೂಕಿನ 263 ಮತಗಟ್ಟೆಗಳಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಈವರೆಗೆ 2,14,454 ಎಣಿಕೆ ನಮೂನೆಗಳನ್ನು ವಿತರಿಸಲಾಗಿದ್ದು, 1,83,167 ಮತದಾರರ ಪರಿಷ್ಕರಣೆ ಪೂರ್ಣಗೊಂಡಿದೆ. 11,355 ಎಎಸ್ಡಿ ಮತದಾರರ ಪರಿಶೀಲನೆ ನಡೆದಿದ್ದು, 111 ಮತದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಪರಿಷ್ಕರಣೆ ಪೂರ್ಣಗೊಳಿಸಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ತಹಸೀಲ್ದಾರ್ ಜಿ.ಎಸ್. ಶಂಕರಪ್ಪ, ಪುರಸಭೆ ಮುಖ್ಯಾಧಿಕಾರಿ ಆರ್. ಯತೀಶ್ ಕುಮಾರ್, ಗ್ರೇಡ್-2 ತಹಸೀಲ್ದಾರ್ ಗಿರೀಶ್ ಬಾಬು, ಚುನಾವಣಾ ಶಿರಸ್ತೇದಾರ್ ಅನಿಲ್, ತಾಲ್ಲೂಕು ಪಂಚಾಯಿತಿ ಮ್ಯಾನೇಜರ್ ಗಿರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಬಿಎಲ್ಒಗಳು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ